600ಕ್ಕೂ ಅಧಿಕ ಅಹವಾಲು ಸ್ವೀಕಾರ: ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಕ್ಕೆ ‘ಪ್ರಜಾಸೇವೆ’ ಆಂದೋಲನ

ಕಾರವಾರ: ಸರ್ಕಾರದ ಜನಪರ ಯೋಜನೆಗಳು ಕೇವಲ ಪಟ್ಟಿಯಲ್ಲಿ ಉಳಿಯದೆ ಬಡವರು ಹಾಗೂ ಸಾಮಾನ್ಯ ಜನರ ಬದುಕಿನಲ್ಲಿ ಬದಲಾವಣೆ ತರುವ ಮೂಲಕ ಅವರ ಜೀವನಕ್ಕೆ ಬೆಳಕು ನೀಡುವಂತಾಗಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.
ಸಿದ್ದಾಪುರ ತಾಲ್ಲೂಕಿನ ಹಲಿಗೇರಿ ಹೋಬಳಿಯಲ್ಲಿ ಶನಿವಾರ ನಡೆದ ತಾಲೂಕು ಮಟ್ಟದ ‘ಪ್ರಜಾಸೇವೆ ಆಂದೋಲನ’ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರದ ಯೋಜನೆಗಳು ಮತ್ತು ಸೇವೆಗಳು ಜನರ ಬದುಕಿನಲ್ಲಿ ಬೆಳಕು ಮೂಡಿಸಬೇಕು ಎಂಬ ಉದ್ದೇಶದಿಂದ ‘ಪ್ರಜಾಸೇವೆ’ ಆಂದೋಲನ ಹಮ್ಮಿಕೊಳ್ಳಲಾಗಿದೆ. ಗ್ರಾಮೀಣ ಭಾಗದ ಜನರು ಎದುರಿಸುತ್ತಿರುವ ರಸ್ತೆ, ಚರಂಡಿ, ಕುಡಿಯುವ ನೀರು, ಶಾಲಾ-ಕಾಲೇಜು ಹಾಗೂ ಶಿಕ್ಷಣ ಸೇರಿದಂತೆ ವಿವಿಧ ಮೂಲಸೌಕರ್ಯ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದು, ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಲು ಈ ಸಭೆಗಳು ಸಹಕಾರಿಯಾಗಿವೆ ಎಂದು ಹೇಳಿದರು.
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ 1.20 ಕೋಟಿಗೂ ಹೆಚ್ಚು ಕುಟುಂಬಗಳು ಪ್ರಯೋಜನ ಪಡೆಯುತ್ತಿವೆ. ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳು ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಆರ್ಥಿಕ ನೆರವು ನೀಡುತ್ತಿವೆ. ಶಿಕ್ಷಣಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ವಿದ್ಯಾರ್ಥಿನಿಯರ ಜೊತೆಗೆ ವಿದ್ಯಾರ್ಥಿಗಳಿಗೂ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸುವ ಮೂಲಕ ಸಮಾನ ಅವಕಾಶಕ್ಕೆ ಒತ್ತು ನೀಡಲಾಗಿದೆ ಎಂದರು.
ಯುವಕರನ್ನು ಸಂಘಟಿಸಿ ಅಭಿವೃದ್ಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ‘ಭಾರತ್ ಜೋಡೋ’ ಯುವ ಸಂಘಟನೆ ಮೂಲಕ ಯುವಶಕ್ತಿಯನ್ನು ಸಬಲೀಕರಣಗೊಳಿಸಲಾಗುತ್ತಿದ್ದು, ಈ ಸಂಘಗಳಿಗೆ ವಾರ್ಷಿಕ ₹10 ಲಕ್ಷ ಅನುದಾನ ನೀಡಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯ ಮಾತನಾಡಿ, ‘ಪ್ರಜಾಸೇವೆ’ ಆಂದೋಲನವು ಸಾರ್ವಜನಿಕರ ಅಹವಾಲುಗಳನ್ನು ತ್ವರಿತವಾಗಿ ಆಲಿಸಿ ಆಡಳಿತವನ್ನು ಜನರ ಮನೆಬಾಗಿಲಿಗೆ ಕೊಂಡೊಯ್ಯುವ ವಿನೂತನ ಅಭಿಯಾನವಾಗಿದೆ ಎಂದರು. ಸಾರ್ವಜನಿಕರಿಂದ ಸ್ವೀಕರಿಸುವ ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ದಾಖಲಿಸಲಾಗುವುದು. ಸ್ವೀಕರಿಸಿದ ಅರ್ಜಿಗಳಿಗೆ 20 ದಿನಗಳೊಳಗೆ ಪರಿಹಾರ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಮಳೆ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿದ್ದು, ಇದನ್ನು ಎದುರಿಸಲು ಸರ್ಕಾರ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ₹1 ಕೋಟಿ ಅನುದಾನ ಮಂಜೂರು ಮಾಡಿದೆ. ಜನರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ವ್ಯವಸ್ಥೆ ಕೈಗೊಳ್ಳಲಾಗುವುದು ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಮಾತನಾಡಿ, ‘ಪ್ರಜಾಸೇವೆ’ ಕೇವಲ ಸಮಸ್ಯೆಗಳನ್ನು ಹೇಳಿಕೊಳ್ಳುವ ವೇದಿಕೆಯಲ್ಲ. ಪಂಚಾಯಿತಿ ಹಾಗೂ ಹೋಬಳಿ ಮಟ್ಟದಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗಳು ಮತ್ತು ಸಾರ್ವಜನಿಕರ ಸಲಹೆಗಳನ್ನೂ ಅಧಿಕಾರಿಗಳ ಗಮನಕ್ಕೆ ತರಬಹುದಾಗಿದೆ. ಇಂತಹ ಸಲಹೆಗಳು ಮುಂದಿನ ಯೋಜನೆಗಳನ್ನು ರೂಪಿಸಲು ಸಹಕಾರಿಯಾಗಲಿವೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಮಾತನಾಡಿ, ಪೊಲೀಸ್ ಇಲಾಖೆಯನ್ನು ಮತ್ತಷ್ಟು ಜನಸ್ನೇಹಿಯಾಗಿಸುವ ಉದ್ದೇಶದಿಂದ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹಿರಿಯ ನಾಗರಿಕರ ಅನುಕೂಲಕ್ಕಾಗಿ ‘ಆಸರೆ’ ಕಾರ್ಯಕ್ರಮ ರೂಪಿಸಲಾಗಿದೆ ಎಂದರು.
ಆನ್‌ಲೈನ್ ವಂಚನೆ ಹಾಗೂ ಸಂಶಯಾಸ್ಪದ ಲಿಂಕ್‌ಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದ ಅವರು, ಅಪರಿಚಿತ ಅಥವಾ ಅನಾವಶ್ಯಕ ಲಿಂಕ್‌ಗಳನ್ನು ತೆರೆಯದಂತೆ ಎಚ್ಚರಿಕೆ ನೀಡಿದರು. ಯುವಜನರು ಮಾದಕವಸ್ತುಗಳಿಂದ ದೂರವಿದ್ದು, ಪೊಲೀಸ್ ಇಲಾಖೆಯ ವಿವಿಧ ಜನಸ್ನೇಹಿ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.
ಸಭೆಯಲ್ಲಿ ಸಾರ್ವಜನಿಕರಿಂದ 600ಕ್ಕೂ ಅಧಿಕ ಅಹವಾಲು ಅರ್ಜಿಗಳನ್ನು ಸ್ವೀಕರಿಸಲಾಯಿತು. ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ವಸತಿ ಯೋಜನೆ, ಗ್ರಾಮೀಣ ರಸ್ತೆ ದುರಸ್ತಿ ಹಾಗೂ ಮೂಲಸೌಕರ್ಯ ಒದಗಿಸುವ ಕುರಿತು ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾದವು.
ಸರ್ಕಾರವು ಭೂ ಗ್ಯಾರಂಟಿ ಯೋಜನೆಯಡಿ ರಾಜ್ಯದ ನಿವೇಶನರಹಿತರಿಗೆ 5 ಲಕ್ಷ ನಿವೇಶನಗಳನ್ನು ನೀಡುವ ಕಾರ್ಯಕ್ರಮ ಜಾರಿಗೆ ತಂದಿದ್ದು, ಇದರಿಂದ ತಮ್ಮ ವಿಧಾನಸಭಾ ಕ್ಷೇತ್ರಕ್ಕೆ 7,000ರಿಂದ 8,000 ನಿವೇಶನಗಳು ದೊರೆಯುವ ನಿರೀಕ್ಷೆಯಿದೆ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು. ನಿವೇಶನ ರಹಿತರು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಕೂಡಲೇ ಸಂಪರ್ಕಿಸಿ ಅರ್ಜಿ ಸಲ್ಲಿಸುವಂತೆ ಮನವಿ ಮಾಡಿದರು.
ರಸ್ತೆ, ಸೇತುವೆ ಸೇರಿದಂತೆ ಇತರ ಮೂಲಸೌಕರ್ಯ ಅಭಿವೃದ್ಧಿಗೆ ಅಗತ್ಯವಿರುವ ಅನುದಾನ ಒದಗಿಸಲಾಗುವುದು ಎಂದರು.
ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯ ಮಾತನಾಡಿ, ಭೂ ಗ್ಯಾರಂಟಿ ಯೋಜನೆಯಡಿ ನಿವೇಶನ ನೀಡಲು ಜಿಲ್ಲೆಯಲ್ಲಿ ಜಾಗ ಗುರುತಿಸುವ ಕಾರ್ಯ ಪ್ರಗತಿಯಲ್ಲಿದ್ದು, ಹಲಿಗೇರಿ ಹೋಬಳಿಯಲ್ಲಿ 63 ಎಕರೆ ಜಾಗ ಗುರುತಿಸಲಾಗಿದೆ. ಜಿಲ್ಲೆಯ ನಿವೇಶನ ರಹಿತರು ಅರ್ಜಿ ಸಲ್ಲಿಸುವ ಕುರಿತು ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ವ್ಯಾಪಕ ಜಾಗೃತಿ ಮೂಡಿಸಬೇಕು ಎಂದರು.
ಅಪಾಯಕಾರಿ ಮರಗಳ ತೆರವು, ವನ್ಯಜೀವಿಗಳಿಂದ ಬೆಳೆ ಹಾನಿ ತಡೆ, ಅತಿಕ್ರಮಣ ತೆರವು ಗೊಂದಲ, ಬಸ್ ಸೌಲಭ್ಯ, ಕಂದಾಯ ದಾಖಲೆ ತಿದ್ದುಪಡಿ ಹಾಗೂ ಪಡಿತರ ಚೀಟಿ ನೀಡುವ ಕುರಿತು ಸಾರ್ವಜನಿಕರು ಅಹವಾಲು ಸಲ್ಲಿಸಿದರು.
ಜಿಲ್ಲೆಯಲ್ಲಿನ ಅತಿಕ್ರಮಣ ತೆರವು ಗೊಂದಲಗಳ ಕುರಿತು ಸೆ. 18ರಂದು ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಗೂ ಮಾಹಿತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ವನ್ಯಜೀವಿ ಹಾವಳಿ ತಡೆಗಟ್ಟಲು ಅಗತ್ಯವಿರುವ ಕಡೆಗಳಲ್ಲಿ ಕಂದಕ ನಿರ್ಮಾಣ ಹಾಗೂ ಸೋಲಾರ್ ಬೇಲಿ ಅಳವಡಿಸಲಾಗುವುದು ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಎಚ್. ಸೂರ್ಯವಂಶಿ ತಿಳಿಸಿದರು.
ಕಾರ್ಯಕ್ರಮದಲ್ಲಿ ತಾಲೂಕು ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಕೆ.ಜಿ. ನಾಗರಾಜ, ಉಪವಿಭಾಗಾಧಿಕಾರಿ ಚಂದ್ರಶೇಖರ್ ಆರ್.ಜಿ., ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ದೇವರಾಜ ಎಂ. ಹಿತ್ತಲಕೊಪ್ಪ, ತಹಸೀಲ್ದಾರ್ ಮಂಜುಳಾ ನಾಯಕ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ಕಾರ್ಮಿಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಪಶುಪಾಲನಾ ಇಲಾಖೆಯ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ಮತ್ತು ವಿಜಿ ಜಿ ರಾಮ್ ಯೋಜನೆಯಡಿ ಜಾಬ್ ಕಾರ್ಡ್‌ಗಳನ್ನು ವಿತರಿಸಲಾಯಿತು.
