
ಕಾರವಾರ: ದೇಶದ ಅರಣ್ಯ ಸಂಪತ್ತು, ವನ್ಯಜೀವಿ ಹಾಗೂ ಪರಿಸರವನ್ನು ರಕ್ಷಿಸುವ ಕರ್ತವ್ಯದಲ್ಲಿ ಪ್ರಾಣತ್ಯಾಗ ಮಾಡಿದ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ತ್ಯಾಗ ಸ್ಮರಣೀಯವಾದುದು ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಪರಮೇಶ್ವರ ಪ್ರಸನ್ನ ಹೇಳಿದರು.
ಶುಕ್ರವಾರ ಕಾರವಾರದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಅರಣ್ಯಗಳು ಕೇವಲ ಮರಗಳ ಸಮೂಹವಲ್ಲ. ಅವು ನಮ್ಮ ಪರಿಸರ ವ್ಯವಸ್ಥೆಯ ಜೀವನಾಡಿಯಾಗಿದ್ದು, ಮಳೆ, ನದಿಗಳು, ಅಂತರ್ಜಲ, ಮಣ್ಣಿನ ಫಲವತ್ತತೆ, ವನ್ಯಜೀವಿಗಳ ಸಂರಕ್ಷಣೆ ಹಾಗೂ ಮಾನವನ ಆರೋಗ್ಯದೊಂದಿಗೆ ನೇರ ಸಂಬಂಧ ಹೊಂದಿವೆ. ಪರಿಸರ ಸಂರಕ್ಷಣೆ ಅರಣ್ಯ ಇಲಾಖೆಯ ಕೆಲಸ ಮಾತ್ರವಲ್ಲ, ಪ್ರತಿಯೊಬ್ಬ ನಾಗರಿಕನ ಹೊಣೆಗಾರಿಕೆಯಾಗಿದೆ ಎಂದು ಅವರು ತಿಳಿಸಿದರು.
ನಮ್ಮ ಸಂವಿಧಾನವೂ ಪರಿಸರ ರಕ್ಷಣೆಗೆ ವಿಶೇಷ ಮಹತ್ವ ನೀಡಿದೆ. ಸಂವಿಧಾನದ ವಿಧಿ 48ಎ ಪರಿಸರ, ಅರಣ್ಯ ಮತ್ತು ವನ್ಯಜೀವಿಗಳನ್ನು ರಕ್ಷಿಸಲು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡುತ್ತದೆ. ವಿಧಿ 51ಎ ಅಡಿಯಲ್ಲಿ ಪ್ರತಿಯೊಬ್ಬ ನಾಗರಿಕನು ನೈಸರ್ಗಿಕ ಪರಿಸರ, ಅರಣ್ಯಗಳು, ನದಿಗಳು, ಸರೋವರಗಳು ಹಾಗೂ ವನ್ಯಜೀವಿಗಳನ್ನು ರಕ್ಷಿಸಿ ಸುಧಾರಿಸುವುದು ಮತ್ತು ಪ್ರಾಣಿಗಳ ಬಗ್ಗೆ ಕರುಣೆ ತೋರುವುದು ಕರ್ತವ್ಯವಾಗಿದೆ ಎಂದರು.
ಪರಿಸರ ಸಂರಕ್ಷಣೆ ಕೇವಲ ಕಾನೂನಾತ್ಮಕ ಜವಾಬ್ದಾರಿಯಲ್ಲ; ಅದು ಸಂವಿಧಾನಿಕ ಹಾಗೂ ನೈತಿಕ ಕರ್ತವ್ಯವೂ ಆಗಿದೆ. ಅರಣ್ಯ ಹುತಾತ್ಮರ ದಿನಾಚರಣೆ ಕೇವಲ ಪುಷ್ಪನಮನಕ್ಕೆ ಸೀಮಿತವಾಗದೆ, ಹುತಾತ್ಮರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಸಂಕಲ್ಪದ ದಿನವಾಗಬೇಕು. ಅರಣ್ಯವನ್ನು ರಕ್ಷಿಸುವುದು ಎಂದರೆ ನಮ್ಮ ಭವಿಷ್ಯವನ್ನು ರಕ್ಷಿಸುವುದು ಎಂಬ ಸಂದೇಶವನ್ನು ಎಲ್ಲರೂ ಅರಿತುಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಥೋನಿ ಮರಿಯಪ್ಪ ಅವರು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯ ಮಹತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಡಿ. ನಾಯಕ ಅವರು ಹುತಾತ್ಮರಾದ 65 ಅರಣ್ಯ ಸಿಬ್ಬಂದಿಯ ಹೆಸರುಗಳನ್ನು ವಾಚಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ್ ಶಶಿ, ಐಡಿಎಎಸ್ (ನೌಕಾನೆಲೆ) ರಜತ ಕುಮಾರ, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಜಿ. ನಾವಿ, ಸಿಆರ್‌ಝಡ್‌ನ ಪ್ರಾದೇಶಿಕ ನಿರ್ದೇಶಕ ಪ್ರವೀಣ್ ಬಸ್ರೂರು, ಸಾಮಾಜಿಕ ಅರಣ್ಯ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗಜಾನನ ಹೆಗಡೆ, ಅಂಕೋಲಾ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಪುಲ್ಲ ಶೆಟ್ಟಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಅರಣ್ಯ ಸಂರಕ್ಷಣೆಯಲ್ಲಿ ಹುತಾತ್ಮರಾದ ಸಿಬ್ಬಂದಿಯ ಗೌರವಾರ್ಥ ಮೂರು ಸುತ್ತು ಗುಂಡು ಹಾರಿಸಲಾಯಿತು. ಉಪ ವಲಯ ಅರಣ್ಯಾಧಿಕಾರಿ ಗಣಪತಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
