UK Express Logo

ಆಯುಷ್ಮಾನ್ ಆರೋಗ್ಯ ಕೇಂದ್ರ ಸ್ಥಗಿತಗೊಳಿಸದಂತೆ ಸ್ಥಳೀಯರ ಆಗ್ರಹ

By UKExpress on 10/4/2026

ಯಲ್ಲಾಪುರ: ಪಟ್ಟಣದ ರವೀಂದ್ರ ನಗರದಲ್ಲಿರುವ ಆಯುಷ್ಮಾನ್ ಆರೋಗ್ಯ ಕೇಂದ್ರವನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸಬಾರದು ಎಂದು ಆಗ್ರಹಿಸಿ ಶನಿವಾರ ಸ್ಥಳೀಯರು ಕೇಂದ್ರದ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿದರು.

ಪಪಂ ಮಾಜಿ ಸದಸ್ಯ ಸೋಮೇಶ್ವರ ನಾಯ್ಕ ನೇತೃತ್ವದಲ್ಲಿ ನಡೆದ ಈ ಸಂದರ್ಭದಲ್ಲಿ, ಆಯುಷ್ಮಾನ್ ಆರೋಗ್ಯ ಕೇಂದ್ರವನ್ನು ಸ್ಥಳೀಯವಾಗಿಯೇ ಮುಂದುವರಿಸಬೇಕು ಎಂದು ಒತ್ತಾಯಿಸಲಾಯಿತು.

ಆಸ್ಪತ್ರೆ ಸ್ಥಗಿತಗೊಳ್ಳಲಿದೆ ಎಂಬ ವದಂತಿ ಹಿನ್ನೆಲೆಯಲ್ಲಿ ಈಗಾಗಲೇ ತಹಶೀಲ್ದಾರ್ ಎಂ.ಆರ್. ಕುಲಕರ್ಣಿ ಹಾಗೂ ತಾಲೂಕು ಆರೋಗ್ಯಾಧಿಕಾರಿ ಡಾ. ನರೇಂದ್ರ ಪವಾರ ಅವರಿಗೆ ಮನವಿ ಸಲ್ಲಿಸಲಾಗಿದೆ. ಆದರೂ ಕೇಂದ್ರ ಬಂದ್ ಆಗಲಿದೆ ಎಂಬ ಮಾತುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರು ಮತ್ತೆ ಒಗ್ಗೂಡಿ ಕೇಂದ್ರವನ್ನು ಉಳಿಸುವಂತೆ ಆಗ್ರಹಿಸಿದರು.

ಸ್ಥಳೀಯರಾದ ಪುಷ್ಪಾ ಬಿಣಗೇಕರ ಹಾಗೂ ಪುಷ್ಪಾ ಗಾಳಪ್ಪನವರ್ ಮಾತನಾಡಿ, ಕಳೆದ ಆರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಆಯುಷ್ಮಾನ್ ಆರೋಗ್ಯ ಕೇಂದ್ರವು ರವೀಂದ್ರ ನಗರ, ವಡ್ಡರ ಕಾಲೋನಿ ಸೇರಿದಂತೆ ಸುತ್ತಮುತ್ತಲಿನ ನಿವಾಸಿಗಳಿಗೆ ಬಹಳಷ್ಟು ಅನುಕೂಲವಾಗಿದೆ ಎಂದು ತಿಳಿಸಿದರು.

ಹಿರಿಯ ನಾಗರಿಕರು, ಬಡವರು ಹಾಗೂ ಮಕ್ಕಳಿಗೆ ಸ್ಥಳೀಯವಾಗಿಯೇ ಚಿಕಿತ್ಸೆ, ಔಷಧಿ ಮತ್ತು ಮಾತ್ರೆಗಳು ದೊರೆಯುವುದರಿಂದ ದೂರದ ತಾಲೂಕು ಆಸ್ಪತ್ರೆಗೆ ತೆರಳುವ ಅನಿವಾರ್ಯತೆ ತಪ್ಪಿದೆ. ಹೀಗಾಗಿ ಕೇಂದ್ರವನ್ನು ಸ್ಥಗಿತಗೊಳಿಸದೆ ಹಿಂದಿನಂತೆಯೇ ಮುಂದುವರಿಸಬೇಕು ಎಂದು ಅವರು ಒತ್ತಾಯಿಸಿದರು.

ಅಧಿಕಾರಿಗಳು ಹಾಗೂ ಶಾಸಕ ಶಿವರಾಮ ಹೆಬ್ಬಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಆಯುಷ್ಮಾನ್ ಆರೋಗ್ಯ ಕೇಂದ್ರವನ್ನು ಉಳಿಸಿಕೊಡಬೇಕು ಎಂದು ಸ್ಥಳೀಯರು ಆಗ್ರಹಿಸಿದರು.