
ಕಾರವಾರ: ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ತಡೆಗಟ್ಟುವ ಹಾಗೂ ಮಕ್ಕಳ ಹಕ್ಕುಗಳನ್ನು ರಕ್ಷಿಸುವ ಉದ್ದೇಶದಿಂದ ಉತ್ತರ ಕನ್ನಡ ಜಿಲ್ಲಾ ಪೊಲೀಸರು ಜಿಲ್ಲೆಯಾದ್ಯಂತ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಿದರು.
ಸೆ. 12ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬಾಲಕಾರ್ಮಿಕರು ಕೆಲಸ ಮಾಡುತ್ತಿರುವ ಸಾಧ್ಯತೆ ಇರುವ ಅಂಗಡಿಗಳು, ಹೋಟೆಲ್‌ಗಳು, ಗ್ಯಾರೇಜ್‌ಗಳು, ವರ್ಕ್‌ಶಾಪ್‌ಗಳು ಸೇರಿದಂತೆ ವಿವಿಧ ವಾಣಿಜ್ಯ ಸಂಸ್ಥೆಗಳು ಹಾಗೂ ಸಂಬಂಧಿತ ಸ್ಥಳಗಳಲ್ಲಿ ತಪಾಸಣೆ ನಡೆಸಲಾಯಿತು.
ಕಾರ್ಯಾಚರಣೆಯಲ್ಲಿ ಜಿಲ್ಲೆಯಾದ್ಯಂತ ಒಟ್ಟು 282 ಸ್ಥಳಗಳನ್ನು ಪರಿಶೀಲಿಸಲಾಗಿದ್ದು, ಬಾಲಕಾರ್ಮಿಕರನ್ನು ನೇಮಿಸಿಕೊಂಡಿರುವ ಪ್ರಕರಣಗಳು, ಮಕ್ಕಳ ಹಕ್ಕುಗಳ ಉಲ್ಲಂಘನೆ ಹಾಗೂ ಮಕ್ಕಳ ಮೇಲಿನ ಶೋಷಣೆಯ ಕುರಿತು ಪರಿಶೀಲನೆ ನಡೆಸಲಾಯಿತು.
ತಪಾಸಣೆಯ ವೇಳೆ ಬಾಲಕಾರ್ಮಿಕರಿಗೆ ಸಂಬಂಧಿಸಿದ ಯಾವುದೇ ಪ್ರಕರಣ ಪತ್ತೆಯಾಗಿಲ್ಲ. ಮಕ್ಕಳನ್ನು ಯಾವುದೇ ರೀತಿಯ ಕೆಲಸಕ್ಕೆ ನೇಮಿಸಿಕೊಳ್ಳದಂತೆ ವ್ಯಾಪಾರಸ್ಥರು, ಉದ್ಯಮಿಗಳು ಹಾಗೂ ಸಾರ್ವಜನಿಕರಿಗೆ ಪೊಲೀಸರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಕಾನೂನುಬಾಹಿರವಾಗಿದ್ದು, ಇಂತಹ ಪ್ರಕರಣಗಳು ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣ ಸಂಬಂಧಪಟ್ಟ ಪೊಲೀಸ್ ಠಾಣೆ, 112 ತುರ್ತು ಸಹಾಯವಾಣಿ ಅಥವಾ 1098 ಮಕ್ಕಳ ಸಹಾಯವಾಣಿಗೆ ಮಾಹಿತಿ ನೀಡುವಂತೆ ಉತ್ತರ ಕನ್ನಡ ಜಿಲ್ಲಾ ಪೊಲೀಸರು ಮನವಿ ಮಾಡಿದ್ದಾರೆ.
“ಮಕ್ಕಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ. ಬಾಲಕಾರ್ಮಿಕ ಪದ್ಧತಿಗೆ ಸಂಪೂರ್ಣ ಕಡಿವಾಣ ಹಾಕಲು ಪೊಲೀಸರೊಂದಿಗೆ ಕೈಜೋಡಿಸಿ” ಎಂದು ಪೊಲೀಸರು ಸಾರ್ವಜನಿಕರಿಗೆ ಕರೆ ನೀಡಿದ್ದಾರೆ.
