ಭಟ್ಕಳ: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ಭಟ್ಕಳ ಶಹರ ಠಾಣೆ ಪೊಲೀಸರು ಬಂಧಿಸಿ, 146 ಗ್ರಾಂ ಗಾಂಜಾ ಸೇರಿದಂತೆ ಒಟ್ಟು ಸುಮಾರು ₹80 ಸಾವಿರ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಆ.30ರಂದು ಮಧ್ಯಾಹ್ನ 3.30ರ ಸುಮಾರಿಗೆ ಭಟ್ಕಳ ನಗರದ ಮುಗ್ಗುಂಕಾಲೋನಿ ಶಾಹೀನ್ ಗ್ರೌಂಡ್‌ನಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ 146 ಗ್ರಾಂ ಗಾಂಜಾ (ಪ್ಲಾಸ್ಟಿಕ್ ಕವರ್ ಸಮೇತ) ಪತ್ತೆಯಾಗಿದ್ದು, ಇದರ ಅಂದಾಜು ಮೌಲ್ಯ ₹10 ಸಾವಿರ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತರನ್ನು ಮೊಹಮ್ಮದ್ ಸಿಮ್ರಾನ್ (29), ಮೊಹಮ್ಮದ್ ಅಖೀಲ್ (25) ಹಾಗೂ ಮೊಹಮ್ಮದ್ ಇಮ್ರಾನ್ (25) ಎಂದು ಗುರುತಿಸಲಾಗಿದೆ. ಆರೋಪಿಗಳು ಗಾಂಜಾವನ್ನು ಕಪ್ಪು ಬಣ್ಣದ ಕಾಲೇಜು ಬ್ಯಾಗ್‌ನಲ್ಲಿ ಇಟ್ಟುಕೊಂಡು, ಸಣ್ಣ ಜಿಪ್‌ಲೈನ್ ಕವರ್‌ನಲ್ಲಿ ಪ್ಯಾಕ್ ಮಾಡಿ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದಾಳಿಯ ವೇಳೆ ಗಾಂಜಾ ಸಾಗಾಟಕ್ಕೆ ಬಳಸಿದ್ದ ಹೀರೋ ಹೋಂಡಾ ಪ್ಯಾಷನ್ ಪ್ಲಸ್ ಬೈಕ್, ಹೋಂಡಾ SP125 ಬೈಕ್ ಹಾಗೂ ಸುಜುಕಿ ಹಯಾಬುಸಾ ಬೈಕ್ ಸೇರಿದಂತೆ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸ್ವತ್ತುಗಳ ಒಟ್ಟು ಮೌಲ್ಯ ಸುಮಾರು ₹80 ಸಾವಿರ ಎಂದು ತಿಳಿಸಲಾಗಿದೆ.
ಈ ಕುರಿತು ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಂ. ಕೃಷ್ಣಮೂರ್ತಿ ಹಾಗೂ ಭಟ್ಕಳ ಉಪವಿಭಾಗದ ಡಿವೈಎಸ್‌ಪಿ ಗಿರೀಶ್ ಬಿ. ಅವರ ಮಾರ್ಗದರ್ಶನದಲ್ಲಿ, ಭಟ್ಕಳ ಶಹರ ಠಾಣೆ ಪೊಲೀಸ್ ನಿರೀಕ್ಷಕ ದಿವಾಕರ್ ಪಿ.ಎಂ. ನೇತೃತ್ವದಲ್ಲಿ ಪಿಎಸ್‌ಐ (L&O) ನವೀನ್ ಎಸ್. ನಾಯ್ಕ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.
