UK Express Logo

ಹೊನ್ನಾವರ ಸಮೀಪ ನಿಯಂತ್ರಣ ತಪ್ಪಿ ಪಲ್ಟಿಯಾದ ಖಾಸಗಿ ಬಸ್: 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

By UKExpress on 3/9/2026
Featured Image ಹೊನ್ನಾವರ: ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿ ಬಿದ್ದ ಘಟನೆ ಹೊನ್ನಾವರ ತಾಲೂಕಿನ ಅಳ್ಳಂಕಿ ಸಮೀಪದ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಬಸ್ಸಿನಲ್ಲಿದ್ದ 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಶ್ರೀಕುಮಾರ್ ಟ್ರಾವೆಲ್ಸ್ ಸಂಸ್ಥೆಗೆ ಸೇರಿದ ಖಾಸಗಿ ಬಸ್ ಮಾರ್ಚ್ 8ರಂದು ರಾತ್ರಿ ಹೊನ್ನಾವರದಿಂದ ಸಾಗರ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿತ್ತು. ಮಾರ್ಗಮಧ್ಯೆ ಗೇರುಸೊಪ್ಪ ಸಮೀಪದ ಅಳ್ಳಂಕಿ ಫ್ಯಾಕ್ಟರಿ ಕ್ರಾಸ್ ಬಳಿಯ ರಸ್ತೆಯ ತಿರುವಿನಲ್ಲಿ, ಏಕಾಏಕಿ ಎದುರಾದ ಸ್ಕೂಟಿ ಸವಾರನಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಚಾಲಕ ದಿಢೀರ್ ಬ್ರೇಕ್ ಹಾಕಿದಾಗ ನಿಯಂತ್ರಣ ಕಳೆದುಕೊಂಡ ಬಸ್ ಪಲ್ಟಿಯಾಗಿದೆ ಎನ್ನಲಾಗಿದೆ.

ಗಾಯಗೊಂಡ ಎಲ್ಲ ಪ್ರಯಾಣಿಕರನ್ನು ತಕ್ಷಣವೇ ಹೊನ್ನಾವರದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೊನ್ನಾವರದ ಗುಂಡಬಾಳದ ನಿವಾಸಿಗಳಾದ ಸುರೇಶ ಕನ್ಯಾ ಗೌಡ , ಆಶಾ ಸುರೇಶ ಗೌಡ ಮತ್ತು ಕೇವಲ 2 ವರ್ಷದ ಮಗುವೊಂದು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ದುರ್ಘಟನೆಯಲ್ಲಿ ಬಸ್ಸಿನಲ್ಲಿದ್ದ ಇತರೆ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಅವರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಅಪಘಾತ ಸಂಭವಿಸುತ್ತಿದ್ದಂತೆ ತಕ್ಷಣ ನೆರವಿಗೆ ಬಂದ ಸ್ಥಳೀಯರು, ಬಸ್ಸಿನಲ್ಲಿ ಸಿಲುಕಿದ್ದವರನ್ನು ಹೊರತೆಗೆಯುವ ಮೂಲಕ ತುರ್ತು ರಕ್ಷಣಾ ಕಾರ್ಯಾಚರಣೆಗೆ ಕೈಜೋಡಿಸಿದರು. ಬಸ್ ರಸ್ತೆಗೆ ಉರುಳಿದ್ದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡು ಟ್ರಾಫಿಕ್ ಜಾಮ್ ಉಂಟಾಗಿತ್ತು. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಹೊನ್ನಾವರ ಪೊಲೀಸರು, ಸ್ಥಳೀಯರ ನೆರವಿನೊಂದಿಗೆ ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಈ ಕುರಿತು ಬಸ್ ಚಾಲಕನ ವಿರುದ್ಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಅಪಘಾತದ ಕುರಿತು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.