
ಉತ್ತರ ಕನ್ನಡ: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ನಡೆಯುತ್ತಿದ್ದ ಅಕ್ರಮ ಜೂಜಾಟದ ವಿರುದ್ಧ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಹಮ್ಮಿಕೊಂಡಿದ್ದ ವಿಶೇಷ ಕಾರ್ಯಾಚರಣೆಯಲ್ಲಿ 94 ಮಂದಿಯನ್ನು ಬಂಧಿಸಲಾಗಿದ್ದು, ಒಟ್ಟು 18 ಪ್ರಕರಣಗಳು ದಾಖಲಾಗಿವೆ.
ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಇಸ್ಪೀಟ್ ಎಲೆಗಳ ಮೂಲಕ ಹಣವನ್ನು ಪಣವಾಗಿಟ್ಟು ಜೂಜಾಟ ನಡೆಸುವ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಜಿಲ್ಲಾ ಪೊಲೀಸ್ ಇಲಾಖೆ ಕಳೆದ 10 ದಿನಗಳಿಂದ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದೆ. ಜಿಲ್ಲೆಯ ಎಲ್ಲಾ ತಾಲೂಕುಗಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಅಕ್ರಮ ಜೂಜಾಟದಲ್ಲಿ ತೊಡಗಿದ್ದವರನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ತಾಲೂಕುವಾರು ಪ್ರಕರಣಗಳನ್ನು ಗಮನಿಸಿದರೆ ಹಳಿಯಾಳದಲ್ಲಿ ಅತಿ ಹೆಚ್ಚು 8 ಪ್ರಕರಣಗಳು ದಾಖಲಾಗಿದ್ದು, ಹೊನ್ನಾವರದಲ್ಲಿ 4, ಕುಮಟಾ ಮತ್ತು ಶಿರಸಿಯಲ್ಲಿ ತಲಾ 2, ಭಟ್ಕಳ ಹಾಗೂ ಸಿದ್ದಾಪುರದಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ. ಈ ಮೂಲಕ ಒಟ್ಟು 18 ಪ್ರಕರಣಗಳಲ್ಲಿ 94 ಮಂದಿಯನ್ನು ಬಂಧಿಸಲಾಗಿದೆ.
ಹಬ್ಬದ ಸಂಭ್ರಮದ ಹೆಸರಿನಲ್ಲಿ ಅಕ್ರಮ ಜೂಜಾಟದಲ್ಲಿ ತೊಡಗುವುದು ಕಾನೂನುಬಾಹಿರವಾಗಿದ್ದು, ಇಂತಹ ಚಟುವಟಿಕೆಗಳಲ್ಲಿ ಭಾಗವಹಿಸುವವರ ವಿರುದ್ಧ ಕಾನೂನು ಕ್ರಮ ಮುಂದುವರಿಯಲಿದೆ ಎಂದು ಪೊಲೀಸ್ ಇಲಾಖೆ ಎಚ್ಚರಿಸಿದೆ.
ಜೂಜಾಟದಿಂದ ವ್ಯಕ್ತಿಯ ಆರ್ಥಿಕ ಸ್ಥಿತಿಗೆ ಧಕ್ಕೆಯಾಗುವುದಲ್ಲದೆ, ಕುಟುಂಬದ ನೆಮ್ಮದಿ ಹಾಗೂ ಸಾಮಾಜಿಕ ಸ್ವಾಸ್ಥ್ಯಕ್ಕೂ ಹಾನಿಯಾಗುತ್ತದೆ. ಸಾರ್ವಜನಿಕರು ಇಂತಹ ಚಟುವಟಿಕೆಗಳಿಂದ ದೂರವಿದ್ದು, ಯಾವುದೇ ಅಕ್ರಮ ಜೂಜಾಟ ನಡೆಯುತ್ತಿರುವುದು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಮನವಿ ಮಾಡಿದೆ. ಜಿಲ್ಲೆಯಾದ್ಯಂತ ಅಕ್ರಮ ಚಟುವಟಿಕೆಗಳ ವಿರುದ್ಧ ವಿಶೇಷ ನಿಗಾ ಹಾಗೂ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
