
ಕಾರವಾರ: ನಾವಿನ್ಯತೆ, ತಾರ್ಕಿಕ ಸಾಧನೆ, ಕ್ರೀಡೆ, ಕಲೆ-ಸಾಂಸ್ಕೃತಿಕ ಹಾಗೂ ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ 5 ರಿಂದ 18 ವರ್ಷದೊಳಗಿನ ಮಕ್ಕಳನ್ನು ಗುರುತಿಸಿ, 2026-27ನೇ ಸಾಲಿನ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ನೀಡಲಾಗುತ್ತಿದೆ.
ಜಿಲ್ಲೆಯಲ್ಲಿ ನೆಲೆಸಿರುವ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿರುವ, 2008ರ ಆಗಸ್ಟ್ 1ರಂದು ಅಥವಾ ನಂತರ ಜನಿಸಿದ ಮಕ್ಕಳು ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ₹10,000 ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು.
ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಮಕ್ಕಳು ಅಪ್ರತಿಮ ಪ್ರತಿಭೆ ಹೊಂದಿದ್ದು, ತಮ್ಮ ಸಾಧನೆಯನ್ನು ಸಮರ್ಥಿಸುವ ಪೂರಕ ದಾಖಲೆಗಳನ್ನು ಸಲ್ಲಿಸಬೇಕು. ದಿನಪತ್ರಿಕೆಗಳಲ್ಲಿ ಪ್ರಕಟಗೊಂಡಿರುವ ಸುದ್ದಿ ತುಣುಕುಗಳು, ಪ್ರಮಾಣಪತ್ರಗಳು, ರಾಷ್ಟ್ರ, ರಾಜ್ಯ ಅಥವಾ ಜಿಲ್ಲಾ ಮಟ್ಟದಲ್ಲಿ ಭಾಗವಹಿಸಿರುವ ಹಾಗೂ ಪ್ರಶಸ್ತಿ ಪಡೆದಿರುವ ವಿವರಗಳನ್ನು ಅರ್ಜಿಯೊಂದಿಗೆ ಒದಗಿಸಬೇಕು. ಅಲ್ಲದೆ, ಕನಿಷ್ಠ 5 ವರ್ಷಗಳಿಂದ ಕರ್ನಾಟಕದಲ್ಲಿ ನೆಲೆಸಿರುವ ಬಗ್ಗೆ ಸ್ವಯಂ ದೃಢೀಕರಣ ಹಾಗೂ ವಯಸ್ಸಿನ ಪ್ರಮಾಣ ಪತ್ರವನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು.
ಹಿಂದಿನ ವರ್ಷ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ಪಡೆದ ಮಕ್ಕಳಿಗೆ ಪುನಃ ಈ ಪ್ರಶಸ್ತಿ ಪಡೆಯಲು ಅವಕಾಶ ಇರುವುದಿಲ್ಲ.
2026-27ನೇ ಸಾಲಿನ ಪ್ರಶಸ್ತಿಗೆ ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಸಂಬಂಧಿಸಿದ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಅಥವಾ ಕಾರವಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಪಡೆಯಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಅಕ್ಟೋಬರ್ 30ರೊಳಗೆ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರವಾರ ಇವರಿಗೆ ತಲುಪುವಂತೆ ಸಲ್ಲಿಸಬೇಕು. ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
