ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಹೆಲ್ಮೆಟ್ ಧರಿಸದ ಕಾರಣ ಸ್ಥಳದಲ್ಲೇ ಪ್ರಾಣಬಿಟ್ಟ ಸವಾರ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹಳದೀಪುರ ಅಗ್ರಹಾರದ ಸಮೀಪ ಕೆ.ಎಸ್.ಆರ್.ಟಿ.ಸಿ (KSRTC) ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಗುರುವಾರ ರಾತ್ರಿ ನಡೆದಿದೆ.
ಮೃ, ತರನ್ನು ನವಿಲಗೋಣ ಗ್ರಾಮದ ಚಿಪ್ಪಿಹಕ್ಕಲ್ ನಿವಾಸಿ ವೆಂಕಟೇಶ ಗೋಪಾಲಕೃಷ್ಣ ವೈದ್ಯ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಇವರು, ಗುರುವಾರ ರಾತ್ರಿ ತಮ್ಮ ಮನೆಯಿಂದ ಹಳದೀಪುರಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಕೆ.ಎಸ್.ಆರ್.ಟಿ.ಸಿ ಬಸ್‌ಗೆ ಇವರ ಬೈಕ್ ಮುಖಾಮುಖಿ ಡಿಕ್ಕಿಯಾಗಿದೆ.
ಹೆಲ್ಮೆಟ್ ಇಲ್ಲದಿದ್ದೇ ಮುಳುವಾಯ್ತಾ? ದುರಾದೃಷ್ಟವಶಾತ್ ಬೈಕ್ ಸವಾರ ವೆಂಕಟೇಶ ಅವರು ಹೆಲ್ಮೆಟ್ ಧರಿಸಿರಲಿಲ್ಲ ಎಂದು ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ಅವರ ತಲೆ ಭಾಗಕ್ಕೆ ಗಂಭೀರವಾದ ಪೆಟ್ಟಾಗಿದ್ದು, ತೀವ್ರ ರಕ್ತಸ್ರಾವದಿಂದಾಗಿ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು, ಮೃತದೇಹವನ್ನು ಹೊನ್ನಾವರ ತಾಲೂಕು ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದರು. ಈ ಅಪಘಾತದ ಕುರಿತು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

