UK Express Logo

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ: ತಪ್ಪಿದ ಭಾರಿ ಅನಾಹುತ

By UKExpress on 9/9/2026

ಅಂಕೋಲಾ: ರಾಷ್ಟ್ರೀಯ ಹೆದ್ದಾರಿ 66ರ ಅಂಬೇಡ್ಕರ್ ಸರ್ಕಲ್ ಸಮೀಪ ಗ್ಯಾಸ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾದ ಘಟನೆ ಬುಧವಾರ ತಡರಾತ್ರಿ ನಡೆದಿದೆ. ಟ್ಯಾಂಕರ್‌ನಿಂದ ಯಾವುದೇ ಗ್ಯಾಸ್ ಸೋರಿಕೆಯಾಗದ ಕಾರಣ ಸಂಭವನೀಯ ಭಾರಿ ಅನಾಹುತವೊಂದು ತಪ್ಪಿದೆ.

ಮಂಗಳೂರಿನಿಂದ ಹುಬ್ಬಳ್ಳಿಯತ್ತ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಅಂಕೋಲಾ ಮಾರ್ಗವಾಗಿ ತೆರಳುತ್ತಿದ್ದ ವೇಳೆ ಧಾರಾಕಾರ ಮಳೆಯಿಂದಾಗಿ ರಸ್ತೆ ಸ್ಪಷ್ಟವಾಗಿ ಕಾಣದೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ ಎನ್ನಲಾಗಿದೆ.

ಜನವಸತಿ ಪ್ರದೇಶದ ಸಮೀಪವೇ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದರಿಂದ ಸ್ಥಳೀಯರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಆದರೆ, ಯಾವುದೇ ಗ್ಯಾಸ್ ಸೋರಿಕೆ ಸಂಭವಿಸದಿರುವುದು ನೆಮ್ಮದಿಗೆ ಕಾರಣವಾಗಿದೆ. ಅಪಘಾತದಲ್ಲಿ ಚಾಲಕ ಸುರಕ್ಷಿತವಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಘಟನೆಯ ಮಾಹಿತಿ ಸ್ಥಳೀಯರಿಂದ ಪೊಲೀಸರಿಗೆ ಲಭ್ಯವಾಗುತ್ತಿದ್ದಂತೆ ಪೊಲೀಸ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕ್ಷಿಪ್ರವಾಗಿ ಸ್ಥಳಕ್ಕೆ ಧಾವಿಸಿದರು. ಸ್ಥಳ ಪರಿಶೀಲನೆ ನಡೆಸಿದ ಸಿಬ್ಬಂದಿ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಟ್ಯಾಂಕರ್ ತೆರವು ಕಾರ್ಯಾಚರಣೆ ಆರಂಭಿಸಿದರು.

ಕ್ರೇನ್‌ಗಳ ನೆರವಿನಿಂದ ಟ್ಯಾಂಕರ್‌ನ್ನು ರಸ್ತೆಯಿಂದ ತೆರವುಗೊಳಿಸಲಾಗಿದ್ದು, ಪೊಲೀಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ತಡರಾತ್ರಿ 3.30ರವರೆಗೆ ಕಾರ್ಯಾಚರಣೆ ನಡೆಸಿದರು.

ಸ್ಥಳೀಯರು ಸಮಯಪ್ರಜ್ಞೆಯಿಂದ ಸಂಬಂಧಿಸಿದ ಇಲಾಖೆಗೆ ಮಾಹಿತಿ ನೀಡಿ ಕಾರ್ಯಾಚರಣೆಗೆ ಸಹಕರಿಸಿದ್ದಾರೆ. ಪೊಲೀಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿಯ ಕ್ಷಿಪ್ರ ಕಾರ್ಯಾಚರಣೆಗೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಅಂಕೋಲಾ ಪೊಲೀಸರು ಪರಿಶೀಲನೆ ನಡೆಸಿ, ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡರು. ಘಟನೆಗೆ ಸಂಬಂಧಿಸಿದಂತೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.