UK Express Logo

ಗುಡ್ಡಳ್ಳಿಯ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಿ ಪ್ರಸ್ತಾವನೆ ಸಲ್ಲಿಸಿ: ಉಪಲೋಕಾಯುಕ್ತ ನ್ಯಾ. ಕೆ.ಎನ್. ಫಣೀಂದ್ರ

By UKExpress on 10/2/2026

ಕಾರವಾರ: ಕಾರವಾರ ನಗರಸಭೆ ವ್ಯಾಪ್ತಿಯಲ್ಲಿದ್ದರೂ ಅಗತ್ಯ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿರುವ ಗುಡ್ಡಳ್ಳಿಯ ಸಮಗ್ರ ಅಭಿವೃದ್ಧಿಗೆ ವಿವರವಾದ ಯೋಜನೆ ರೂಪಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಕರ್ನಾಟಕ ಲೋಕಾಯುಕ್ತದ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.

ಗುರುವಾರ ಗುಡ್ಡಳ್ಳಿಗೆ ಖುದ್ದು ಭೇಟಿ ನೀಡಿದ ಅವರು, ಗ್ರಾಮಸ್ಥರೊಂದಿಗೆ ಸಮಾಲೋಚನೆ ನಡೆಸಿ ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ಮೂಲಭೂತ ಸಮಸ್ಯೆಗಳನ್ನು ಪರಿಶೀಲಿಸಿದರು.

ಗುಡ್ಡಳ್ಳಿಗೆ ರಸ್ತೆ ಸಂಪರ್ಕ ಕಲ್ಪಿಸುವುದು ಗ್ರಾಮಸ್ಥರ ನೂರಾರು ವರ್ಷಗಳ ಪ್ರಮುಖ ಬೇಡಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಲೋಕೋಪಯೋಗಿ, ಅರಣ್ಯ ಇಲಾಖೆ ಹಾಗೂ ನಗರಸಭೆ ಅಧಿಕಾರಿಗಳು ಸಮನ್ವಯದಿಂದ ಯೋಜನೆ ಸಿದ್ಧಪಡಿಸಿ, ಅಂದಾಜು ವೆಚ್ಚದ ಮಾಹಿತಿಯೊಂದಿಗೆ 15 ದಿನಗಳೊಳಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು. ಪ್ರಸ್ತಾವನೆಯ ಪ್ರತಿಯನ್ನು ಲೋಕಾಯುಕ್ತ ಸಂಸ್ಥೆಗೂ ಸಲ್ಲಿಸುವಂತೆ ತಿಳಿಸಿದರು.

ಈ ಪ್ರಕರಣವನ್ನು ಲೋಕಾಯುಕ್ತ ಸಂಸ್ಥೆಯಲ್ಲಿ ಸುಮೋಟೋ ಪ್ರಕರಣವಾಗಿ ದಾಖಲಿಸಿ, ಗುಡ್ಡಳ್ಳಿಯ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು. ಅಗತ್ಯವಿದ್ದಲ್ಲಿ ಮುಖ್ಯಮಂತ್ರಿಗಳೊಂದಿಗೆ ಖುದ್ದು ಚರ್ಚಿಸಿ ಗ್ರಾಮಸ್ಥರ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಉಪಲೋಕಾಯುಕ್ತರು ತಿಳಿಸಿದರು.

ಗ್ರಾಮಸ್ಥರಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಸೂಕ್ತ ಯೋಜನೆ ರೂಪಿಸುವಂತೆ ಸೂಚಿಸಿದ ಅವರು, ಮಕ್ಕಳು ಪ್ರತಿದಿನ ಶಿಕ್ಷಣಕ್ಕಾಗಿ 8 ಕಿ.ಮೀ.ಗೂ ಅಧಿಕ ದೂರದ ಕಡಿದಾದ ಅರಣ್ಯ ರಸ್ತೆಯಲ್ಲಿ ಸಂಚರಿಸಬೇಕಾಗಿರುವುದರಿಂದ ನಗರಸಭೆಯಿಂದ ಅಗತ್ಯ ವಾಹನ ವ್ಯವಸ್ಥೆ ಮಾಡುವಂತೆ ತಿಳಿಸಿದರು.

ಅಲ್ಲದೆ, ತಿಂಗಳಿಗೆ ಒಂದು ಬಾರಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಗುಡ್ಡಳ್ಳಿಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ನಡೆಸಬೇಕು ಎಂದು ಸೂಚಿಸಿದರು. ಗ್ರಾಮದಲ್ಲಿ ಶಾಲೆ ಹಾಗೂ ಅಂಗನವಾಡಿ ಕಟ್ಟಡಗಳ ಅಗತ್ಯವಿದ್ದು, ಈ ಕುರಿತು ಶಿಕ್ಷಣ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಪ್ರಸ್ತುತ ಇರುವ ಶಾಲಾ ಕಟ್ಟಡದಲ್ಲಿ ಅಗತ್ಯ ದುರಸ್ತಿ ಕಾರ್ಯಗಳನ್ನು ಕೈಗೊಳ್ಳುವಂತೆಯೂ ತಿಳಿಸಿದರು.

ಗ್ರಾಮಸ್ಥರ ಮತ್ತೊಂದು ಪ್ರಮುಖ ಸಮಸ್ಯೆಯಾಗಿರುವ ಆಸ್ತಿ ಹಕ್ಕುಪತ್ರಗಳ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸುವಂತೆ ಅಧಿಕಾರಿಗಳಿಗೆ ಉಪಲೋಕಾಯುಕ್ತರು ಸೂಚಿಸಿದರು.

ಗುಡ್ಡಳ್ಳಿಯ ಅತ್ಯಂತ ಕಡಿದಾದ ರಸ್ತೆಯಲ್ಲಿ ಸಂಚರಿಸಿ ಗ್ರಾಮಸ್ಥರ ಸಮಸ್ಯೆಗಳನ್ನು ಖುದ್ದು ವೀಕ್ಷಿಸಲು ಉಪಲೋಕಾಯುಕ್ತರು ತಮ್ಮ ಅಧಿಕೃತ ವಾಹನವನ್ನು ಬಿಟ್ಟು ಸಾಮಾನ್ಯ ಜೀಪ್‌ನಲ್ಲಿ ಗುಡ್ಡ ಏರಿದ್ದು ವಿಶೇಷವಾಗಿತ್ತು.

ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಂ., ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪಲೋಕಾಯುಕ್ತರ ಆಪ್ತ ಕಾರ್ಯದರ್ಶಿ ಕಿರಣ್ ಪಾಟೀಲ್, ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಬಿ.ಪಿ. ದಿನೇಶ್ ಕುಮಾರ್, ಡಿವೈಎಸ್ಪಿ ಧನ್ಯಾ ನಾಯ್ಕ, ನಗರಸಭೆ ಪೌರಾಯುಕ್ತ ಜಗದೀಶ್ ಹುಲಗಜ್ಜಿ ಸೇರಿದಂತೆ ಗುಡ್ಡಳ್ಳಿಯ ಸಾರ್ವಜನಿಕರು ಉಪಸ್ಥಿತರಿದ್ದರು.