
ಹಳಿಯಾಳ: ಪಟ್ಟಣದ ದೇಶಪಾಂಡೆ ನಗರದ ಕೈಗಾರಿಕಾ ಪ್ರದೇಶದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಹಳಿಯಾಳ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ₹6,500 ಮೌಲ್ಯದ 130 ಗ್ರಾಂ ಒಣ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
ಹಳಿಯಾಳದ ಸಿದ್ದರಾಮೇಶ್ವರ ಗಲ್ಲಿಯ ನಿವಾಸಿ ಸುದೀಪ್ ದಶರಥ ಬೋವಿವಡ್ಡರ (20) ಬಂಧಿತ ಆರೋಪಿ.
ನವೆಂಬರ್ 13ರಂದು ಸಂಜೆ 4.30ರ ಸುಮಾರಿಗೆ ಪ್ರೆಸ್ಟೀಜ್ ಬುಕ್ ಹೌಸ್ ಮುಂಭಾಗದ ರಸ್ತೆಯಲ್ಲಿ ಗಾಂಜಾ ಮಾರಾಟ ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ತೆರಳಿ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಪರಿಶೀಲನೆ ವೇಳೆ ಆತನ ಬಳಿಯಿದ್ದ 130 ಗ್ರಾಂ ಒಣ ಗಾಂಜಾವನ್ನು ಜಪ್ತಿ ಮಾಡಲಾಗಿದೆ. ಈ ಕುರಿತು ಹಳಿಯಾಳ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ದಾಂಡೇಲಿ ಉಪವಿಭಾಗದ ಡಿವೈಎಸ್ಪಿ ಗಿರೀಶ್ ಬಿ. ಹಾಗೂ ಹಳಿಯಾಳ ವೃತ್ತ ನಿರೀಕ್ಷಕ ಭೀಮಣ್ಣ ಸೂರಿ ಅವರ ಮಾರ್ಗದರ್ಶನದಲ್ಲಿ ಪಿಎಸ್‌ಐ ಕಿರಣ ಪಾಟೀಲ ಮತ್ತು ತನಿಖಾ ಪಿಎಸ್‌ಐ ಕುಮಾರ ಕಾಂಬಳೆ ನೇತೃತ್ವದ ಪೊಲೀಸ್ ತಂಡ ಕಾರ್ಯಾಚರಣೆ ನಡೆಸಿದೆ.
ಪೊಲೀಸ್ ಸಿಬ್ಬಂದಿಗಳಾದ ಶ್ರೀಶೈಲ್ ಜಿ.ಎಂ., ಲಕ್ಷ್ಮಣ ಪೂಜಾರಿ, ಗುರಪ್ಪ ವಡ್ಡರ, ಗಣೇಶ, ವಿನಾಯಕ್, ಮಲ್ಲಿಕಾರ್ಜುನ ಹಾಗೂ ದೇಮಣ್ಣ ಕೋಳಂಬಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಪ್ರಕರಣ ಪತ್ತೆಹಚ್ಚಿದ ಪೊಲೀಸ್ ತಂಡದ ಕಾರ್ಯವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಶಂಸಿಸಿದ್ದಾರೆ.
ಮಾದಕ ವಸ್ತುಗಳ ಮಾರಾಟ, ಖರೀದಿ ಹಾಗೂ ಸೇವನೆ ಕಾನೂನುಬಾಹಿರವಾಗಿದ್ದು, ಇಂತಹ ಚಟುವಟಿಕೆಗಳ ಕುರಿತು ಮಾಹಿತಿ ದೊರೆತಲ್ಲಿ ಪೊಲೀಸರಿಗೆ ತಿಳಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.
