UK Express Logo

ಕಾರವಾರ–ಮಲ್ಲಾಪುರ ಹೆದ್ದಾರಿಯಲ್ಲಿ ಭಾರಿ ವಾಹನಗಳಿಗೆ ಬ್ರೇಕ್: 30 ಟನ್‌ ಮೇಲ್ಪಟ್ಟ ವಾಹನ ಸಂಚಾರ ನಿಷೇಧ

By UKExpress on 9/9/2026

ಕಾರವಾರ: ರಸ್ತೆ ಸಂಪೂರ್ಣ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಕಾರವಾರ ತಾಲೂಕಿನ ಕಾರವಾರ–ದೇವಳಮಕ್ಕಿ–ಕೆರವಡಿ–ಬೋಳ್ವೆ–ಇರಪಾಗೆ–ಮಲ್ಲಾಪುರ ಮಾರ್ಗವಾಗಿ ಹಾದುಹೋಗುವ ರಾಜ್ಯ ಹೆದ್ದಾರಿ–06ರಲ್ಲಿ 30 ಟನ್‌ಗಿಂತ ಅಧಿಕ ಭಾರದ ವಾಹನಗಳ ಸಂಚಾರವನ್ನು ನಿಷೇಧಿಸಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.

ಮೋಟಾರು ವಾಹನ ಕಾಯ್ದೆ ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಗಳ ಅಡಿಯಲ್ಲಿ ಜಿಲ್ಲಾಧಿಕಾರಿಗಳಿಗೆ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಈ ಆದೇಶ ಹೊರಡಿಸಲಾಗಿದೆ.

ಭಾರಿ ವಾಹನಗಳ ನಿರಂತರ ಸಂಚಾರದಿಂದ ರಾಜ್ಯ ಹೆದ್ದಾರಿ–06ರಲ್ಲಿ ದೊಡ್ಡ ಪ್ರಮಾಣದ ಹೊಂಡಗಳು ನಿರ್ಮಾಣಗೊಂಡಿದ್ದು, ರಸ್ತೆ ಸಂಪೂರ್ಣ ಹಾಳಾಗಿದೆ. ಇದರಿಂದ ವಾಹನ ಅಪಘಾತಗಳು ಸಂಭವಿಸಿ ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟಾಗುವ ಸಾಧ್ಯತೆ ಇರುವುದರಿಂದ ಹಾಗೂ ಶಾಲಾ ಮಕ್ಕಳು ಮತ್ತು ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ 30 ಟನ್‌ಗಿಂತ ಹೆಚ್ಚಿನ ಭಾರದ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಸಾರ್ವಜನಿಕರ ಲಘು ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಹಾಳಾದ ರಸ್ತೆಯನ್ನು ತಕ್ಷಣ ದುರಸ್ತಿ ಮಾಡುವಂತೆ ಸಂಬಂಧಿಸಿದ NPCIL ಯೋಜನಾ ನಿರ್ದೇಶಕರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

ರಸ್ತೆ ದುರಸ್ತಿ ಪೂರ್ಣಗೊಂಡ ಬಳಿಕ ಭಾರಿ ವಾಹನಗಳ ಸಂಚಾರಕ್ಕೆ ರಸ್ತೆ ಯೋಗ್ಯವಾಗಿದೆಯೇ ಎಂಬುದನ್ನು ಖಚಿತಪಡಿಸುವ ರಸ್ತೆ ಸುರಕ್ಷತಾ ಪ್ರಮಾಣಪತ್ರವನ್ನು ಸಲ್ಲಿಸುವಂತೆ ಲೋಕೋಪಯೋಗಿ ಇಲಾಖೆಗೆ ಸೂಚಿಸಲಾಗಿದೆ.

ನಿಷೇಧಿತ ವಾಹನಗಳ ಕುರಿತು ಸಾರ್ವಜನಿಕರಿಗೆ ಸ್ಪಷ್ಟವಾಗಿ ಗೋಚರಿಸುವ ಎಚ್ಚರಿಕೆ ಸೂಚನಾ ಫಲಕಗಳನ್ನು ಅಳವಡಿಸುವಂತೆ ಲೋಕೋಪಯೋಗಿ ಇಲಾಖೆಗೆ ಸೂಚಿಸಲಾಗಿದೆ.

ಇನ್ನು ಪೊಲೀಸ್ ಇಲಾಖೆಯು ಅಗತ್ಯವಿರುವ ಸ್ಥಳಗಳಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಬೇಕು, ಸಂಚಾರ ದಟ್ಟಣೆ ಉಂಟಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ರಸ್ತೆ ದುರಸ್ತಿ ಪೂರ್ಣಗೊಳ್ಳುವವರೆಗೆ ವಾಹನಗಳ ಚಲನವಲನದ ಮೇಲೆ ನಿಗಾ ವಹಿಸಬೇಕು. ಯಾವುದೇ ರೀತಿಯ ಅಪಘಾತ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಆದೇಶಿಸಲಾಗಿದೆ.

ಆಗಸ್ಟ್ 29, 2026ರಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರ ಸಹಿ ಮತ್ತು ಮೊಹರಿನೊಂದಿಗೆ ಈ ಆದೇಶ ಹೊರಡಿಸಲಾಗಿದೆ. ಆದೇಶವನ್ನು ಜಾರಿಗೊಳಿಸಲು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಸೂಚಿಸಲಾಗಿದೆ.