UK Express Logo
BREAKING

ಹೆಬ್ಬಾರಗುಡ್ಡದಲ್ಲಿ ಕಾಡುಕೋಣಗಳ ಹಾವಳಿ; ಜನವಸತಿ ಪ್ರದೇಶದಲ್ಲೇ ಸಂಚಾರದಿಂದ ಗ್ರಾಮಸ್ಥರಲ್ಲಿ ಆತಂಕ

By UKExpress on 11/10/2026

ಅಂಕೋಲಾ: ತಾಲೂಕಿನ ಗಡಿಗ್ರಾಮವಾದ ಹೆಬ್ಬಾರಗುಡ್ಡದ ಜನವಸತಿ ಪ್ರದೇಶಗಳಲ್ಲಿ ಬೃಹತ್ ಗಾತ್ರದ ಕಾಡುಕೋಣಗಳು ನಿರಂತರವಾಗಿ ಕಾಣಿಸಿಕೊಳ್ಳುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಕಾಡುಕೋಣಗಳ ಸಂಚಾರದಿಂದ ಸಾರ್ವಜನಿಕರ ಸುರಕ್ಷತೆಗೆ ಅಪಾಯ ಎದುರಾಗಿದ್ದು, ಅರಣ್ಯ ಇಲಾಖೆ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಡೋಂಗ್ರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಬ್ಬಾರಗುಡ್ಡ ಗ್ರಾಮವು ಸಂಪೂರ್ಣ ಅರಣ್ಯ ಪ್ರದೇಶದಿಂದ ಆವೃತವಾಗಿರುವ ಗುಡ್ಡಗಾಡು ಪ್ರದೇಶವಾಗಿದೆ. ಇಲ್ಲಿ ಕಾಡುಪ್ರಾಣಿಗಳ ಸಂಖ್ಯೆಯೂ ಹೆಚ್ಚಿದ್ದು, ಸುಮಾರು 21 ರೈತ ಕುಟುಂಬಗಳು ವಾಸಿಸುತ್ತಿವೆ. ಈ ಹಿಂದೆ ಕಾಡುಪ್ರಾಣಿಗಳಿಂದ ತೋಟ ಹಾಗೂ ಗದ್ದೆಗಳಿಗೆ ಹಾನಿಯಾಗುತ್ತಿದ್ದರೂ, ಜನರ ಜೀವಕ್ಕೆ ಯಾವುದೇ ಅಪಾಯ ಎದುರಾಗಿರಲಿಲ್ಲ.

ಆದರೆ ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿ ಕಾಡಿನಲ್ಲಿಯೇ ಕಾಣಿಸಿಕೊಳ್ಳುತ್ತಿದ್ದ ಕಾಡುಕೋಣಗಳು ಇದೀಗ ನೇರವಾಗಿ ಜನವಸತಿ ಪ್ರದೇಶಗಳಿಗೆ ಬರುತ್ತಿವೆ. ಕೃಷಿ ಭೂಮಿ ಮಾತ್ರವಲ್ಲದೆ, ಸಾರ್ವಜನಿಕರು ಸಂಚರಿಸುವ ರಸ್ತೆಗಳಲ್ಲಿ ಕೂಡ ಕಾಡುಕೋಣಗಳು ಅಲೆದಾಡುತ್ತಿವೆ. ಇದರಿಂದ ದ್ವಿಚಕ್ರ ವಾಹನ ಸವಾರರು ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿರುವ ಘಟನೆಗಳೂ ನಡೆದಿವೆ.

ಇನ್ನು ಮಹಿಳೆಯರು ಸೇರಿದಂತೆ ಪ್ರತಿನಿತ್ಯ ಕೂಲಿ ಕೆಲಸಕ್ಕೆ ತೆರಳುವ ಗ್ರಾಮಸ್ಥರು ಜೀವಭಯದಲ್ಲಿಯೇ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕಾಡುಕೋಣಗಳ ನಿರಂತರ ಓಡಾಟದಿಂದ ಗ್ರಾಮಸ್ಥರಲ್ಲಿ ಭೀತಿ ಹೆಚ್ಚಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಸಾರ್ವಜನಿಕರ ಜೀವ ಹಾಗೂ ಆಸ್ತಿಪಾಸ್ತಿಗೆ ಯಾವುದೇ ಹಾನಿಯಾಗದಂತೆ ಕ್ರಮ ವಹಿಸಬೇಕು ಎಂದು ಹೆಬ್ಬಾರಗುಡ್ಡ ಗ್ರಾಮಸ್ಥರು ಒತ್ತಾಯಿಸಿದ್ದಾರೆ.