
ಹೊನ್ನಾವರ: ಗೋವುಗಳನ್ನು ಕಳ್ಳತನ ಮಾಡಿ ವಧೆ ಮಾಡಿ ಮಾಂಸ ಮಾರಾಟ ಮಾಡಲು ಅಥವಾ ಕಸಾಯಿಖಾನೆಗೆ ಸಾಗಾಟ ಮಾಡಲು ಉದ್ದೇಶಿಸಿದ್ದ ಆರೋಪದಡಿ ಹೊನ್ನಾವರ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.
ಮುಸ್ಲಿಂಕೇರಿ ಹೆರಂಗಡಿ ನಿವಾಸಿ ಜೈನಲ್ ಅಬಿದ್ದೀನ್ ತಂದೆ ಅಹಮ್ಮದ್ ಕಾಟಾಪರಶು ಬಂಧಿತ ಆರೋಪಿ.
ಸೆಪ್ಟೆಂಬರ್ 26ರಂದು ಹೊನ್ನಾವರ ಪೊಲೀಸ್ ಠಾಣೆಯ ಸಿಬ್ಬಂದಿ ಶಿವಾನಂದ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದರು. ಆರೋಪಿಯು ವಿವಿಧ ಬಣ್ಣದ ಒಟ್ಟು ಏಳು ಜಾನುವಾರುಗಳನ್ನು ಎಲ್ಲಿಂದಲೋ ಕಳ್ಳತನ ಮಾಡಿಕೊಂಡು ಬಂದು ತನ್ನ ಕಂಪೌಂಡ್‌ನಲ್ಲಿ ಕಟ್ಟಿಹಾಕಿದ್ದಾನೆ. ಅವುಗಳನ್ನು ವಧೆ ಮಾಡಿ ಮಾಂಸ ಮಾರಾಟ ಮಾಡಲು ಅಥವಾ ಕಸಾಯಿಖಾನೆಗೆ ಸಾಗಾಟ ಮಾಡಲು ಉದ್ದೇಶಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.
ಈ ಕುರಿತು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಗೋಹತ್ಯೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ-2020 ಹಾಗೂ ಭಾರತೀಯ ನ್ಯಾಯ ಸಂಹಿತೆ-2023ರ ಸಂಬಂಧಿತ ಕಲಂಗಳಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಆರೋಪಿಯ ಪತ್ತೆಗಾಗಿ ಪೊಲೀಸರು ವಿಶೇಷ ಪತ್ತೆ ತಂಡ ರಚಿಸಿದ್ದರು. ಖಚಿತ ಮಾಹಿತಿ ಆಧರಿಸಿ ಜೈನಲ್ ಅಬಿದ್ದೀನ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, ಇತರೆ ಆರೋಪಿಗಳೊಂದಿಗೆ ಸೇರಿಕೊಂಡು ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳ ಪಂಚನಾಮೆ ವೇಳೆ ಅಂದಾಜು ₹20,500 ಮೌಲ್ಯದ 6 ಹೋರಿ ಹಾಗೂ 1 ಆಕಳು ಸೇರಿದಂತೆ ಒಟ್ಟು 7 ಜಾನುವಾರುಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್., ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಿ. ಕೃಷ್ಣಮೂರ್ತಿ, ಭಟ್ಕಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ರಾನು ಗುಪ್ತಾ ಹಾಗೂ ಹೊನ್ನಾವರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಸಿದ್ದರಾಮೇಶ್ವರ ಎಸ್. ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ.
ಪಿಎಸ್‌ಐ ಮಹಾಂತೇಶ ವಾಲ್ಮೀಕಿ ಅವರ ನೇತೃತ್ವದಲ್ಲಿ ಪಿಎಸ್‌ಐ ಮಂಜುನಾಥ ಹಾಗೂ ಪೊಲೀಸ್ ಸಿಬ್ಬಂದಿ ಮನೋಜ್ ಡಿ. ಮತ್ತು ರವಿ ನಾಯ್ಕ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಯ ಕಾರ್ಯವನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಘಿಸಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
