ಕಾರವಾರ: ತಾಲ್ಲೂಕಿನ ಕಡವಾಡ ಸಾರ್ವಜನಿಕ ಸ್ಮಶಾನದಲ್ಲಿ ಶವ ಸಂಸ್ಕಾರಕ್ಕೆ ಅಗತ್ಯ ಮೂಲಸೌಕರ್ಯಗಳ ಕೊರತೆಯಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ.
ಸ್ಮಶಾನದಲ್ಲಿ ಶವ ಸಂಸ್ಕಾರಕ್ಕೆ ಅಳವಡಿಸಿರುವ ಕಬ್ಬಿಣದ ಕಂಬಗಳು ಹಾಗೂ ಸಲಾಕೆಗಳು ತುಕ್ಕು ಹಿಡಿದು ಮುರಿದು ಬಿದ್ದಿವೆ. ಪರಿಣಾಮ, ಸೂಕ್ತ ವ್ಯವಸ್ಥೆ ಇಲ್ಲದೆ ಕಟ್ಟಿಗೆ ಹಾಗೂ ಕಲ್ಲುಗಳನ್ನು ಬಳಸಿಕೊಂಡು ಶವ ಸಂಸ್ಕಾರ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಸಮಸ್ಯೆ ಪರಿಹರಿಸುವಂತೆ ಹಲವು ವರ್ಷಗಳಿಂದ ಮನವಿ ಸಲ್ಲಿಸಿದರೂ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಾರವಾರ ನಗರ ಘಟಕದ ಅಧ್ಯಕ್ಷ ರಾಜಾ ನಾಯ್ಕ ಆರೋಪಿಸಿದ್ದಾರೆ.
ಸ್ಮಶಾನದಲ್ಲಿ ಸೂಕ್ತ ಛಾವಣಿಯ ವ್ಯವಸ್ಥೆಯೂ ಇಲ್ಲ. ನೂತನ ಚಿತಾಗಾರದ ಕಾಮಗಾರಿಯೂ ಅರ್ಧದಲ್ಲೇ ಸ್ಥಗಿತಗೊಂಡಿದೆ. ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಅಗತ್ಯ ಮೂಲಸೌಕರ್ಯ ಕಲ್ಪಿಸುವ ಮೂಲಕ ಸಮಸ್ಯೆ ಬಗೆಹರಿಸಬೇಕು ಎಂದು ರಾಜಾ ನಾಯ್ಕ ಆಗ್ರಹಿಸಿದ್ದಾರೆ.
