
ಕಾರವಾರ: ತಾಲೂಕಿನ ಬಸುಂಗ ಸಮೀಪ ಗೂಡ್ಸ್ ರಿಕ್ಷಾ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಯುವಕ ಮೃತಪಟ್ಟಿರುವ ದಾರುಣ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.
ಮೃತರನ್ನು ಕಾರವಾರದ ಉಳಗಾ ಒಟಿಬಾಗ್ ನಿವಾಸಿ ಪ್ರಸಾದ್ ರಾಜೇಶ್ ಕುಡ್ತಲಕರ (21) ಎಂದು ಗುರುತಿಸಲಾಗಿದೆ. ಅವರು ಅಮ್ಮಾ ಸ್ಕೂಲ್ ವಾಹನದ ಚಾಲಕರಾಗಿ ಕೆಲಸ ಮಾಡುತ್ತಿದ್ದರು.
ಪ್ರಸಾದ್ ಅವರು ಬೈಕ್‌ನಲ್ಲಿ ಬಸುಂಗದಿಂದ ಉಳಗಾ ಕಡೆಗೆ ತೆರಳುತ್ತಿದ್ದ ವೇಳೆ, ಕಿರಿದಾದ ಒಳರಸ್ತೆಯ ತಿರುವಿನಲ್ಲಿ ಎದುರಿನಿಂದ ಬಂದ ಗೂಡ್ಸ್ ರಿಕ್ಷಾಗೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿತ್ತು.
ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಆಂಬುಲೆನ್ಸ್‌ನಲ್ಲಿ ಕರೆದೊಯ್ಯುತ್ತಿದ್ದ ವೇಳೆ ಮಾರ್ಗಮಧ್ಯೆಯೇ ಪ್ರಸಾದ್ ಮೃತಪಟ್ಟಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
