
ಕಾರವಾರ: ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಸೆಪ್ಟೆಂಬರ್ 30ರಂದು ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿ ಸಾರ್ವಜನಿಕ ದೂರುಗಳ ವಿಚಾರಣೆ ನಡೆಸಲಿದ್ದಾರೆ.
ಸೆಪ್ಟೆಂಬರ್ 30ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1.30ರವರೆಗೆ ಹಾಗೂ ಮಧ್ಯಾಹ್ನ 2.30ರಿಂದ ಸಂಜೆ 5.30ರವರೆಗೆ ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ವಿಚಾರಣೆ ನಡೆಯಲಿದೆ.
ಉತ್ತರ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿದ್ದು, ಉಪ ಲೋಕಾಯುಕ್ತರ ಕಾರ್ಯವ್ಯಾಪ್ತಿಗೆ ಒಳಪಡುವ ಹಾಗೂ ತನಿಖೆ ಅಥವಾ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳನ್ನು ದೂರುದಾರರು ಮತ್ತು ಎದುರುದಾರರ ಸಮ್ಮುಖದಲ್ಲಿ ಕಾನೂನು ರೀತ್ಯಾ ವಿಚಾರಣೆ ನಡೆಸಲಾಗುತ್ತದೆ.
ಈಗಾಗಲೇ ಲೋಕಾಯುಕ್ತ ಸಂಸ್ಥೆಯಲ್ಲಿ ದೂರು ದಾಖಲಿಸಿರುವವರು ನಿಗದಿತ ಸಮಯದಲ್ಲಿ ಹಾಜರಾಗಿ ವಿಚಾರಣೆಯ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಲಾಗಿದೆ.
ಸೆಪ್ಟೆಂಬರ್ 30ರ ವಿಚಾರಣಾ ಅವಧಿಯಲ್ಲಿ ಸಾರ್ವಜನಿಕರಿಂದ ಹೊಸದಾಗಿ ಯಾವುದೇ ದೂರುಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
