UK Express Logo

ಕಾರವಾರಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್ ಆಗಮನ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯಿಂದ ಸ್ವಾಗತ

By UKExpress on 11/15/2026

ಕಾರವಾರ: ಬೆಂಗಳೂರು–ಮಡಗಾಂವ್ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆ ಶುಕ್ರವಾರದಿಂದ ಅಧಿಕೃತವಾಗಿ ಆರಂಭಗೊಂಡಿದ್ದು, ಶನಿವಾರ ಮಧ್ಯಾಹ್ನ 2.30ಕ್ಕೆ ಕಾರವಾರ ರೈಲು ನಿಲ್ದಾಣಕ್ಕೆ ಆಗಮಿಸಿದ ರೈಲನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಕಾಗೇರಿ, ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಜಿಲ್ಲೆಯ ಮುರುಡೇಶ್ವರ, ಗೋಕರ್ಣ ಹಾಗೂ ಕಾರವಾರದಲ್ಲಿ ನಿಲುಗಡೆ ಕಲ್ಪಿಸಿರುವುದು ಜಿಲ್ಲೆಯ ಜನರಿಗೆ ಸಂತಸದ ವಿಚಾರವಾಗಿದೆ. ಜಿಲ್ಲೆಗೆ ಈ ರೈಲು ಸೇವೆಯನ್ನು ಒದಗಿಸಿದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ರೈಲ್ವೆ ಸಚಿವರು ಹಾಗೂ ರೈಲ್ವೆ ಖಾತೆಯ ರಾಜ್ಯ ಸಚಿವರಿಗೆ ಜಿಲ್ಲೆಯ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಇದೇ ವೇಳೆ ಕೊಂಕಣ ರೈಲ್ವೆಯ ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರ ಸರ್ಕಾರ ವಿಶೇಷ ಆದ್ಯತೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಕೊಂಕಣ ರೈಲ್ವೆಯ ಸುಧಾರಣೆಗಾಗಿ ಸುಮಾರು ₹7,000 ಕೋಟಿ ಅನುದಾನಕ್ಕೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

ಮುಂಬರುವ ದಿನಗಳಲ್ಲಿ ಈ ಅನುದಾನ ಅನುಷ್ಠಾನಗೊಂಡರೆ ಕೊಂಕಣ ರೈಲ್ವೆಗೆ ಸಂಬಂಧಿಸಿದ ಹಲವು ಅಗತ್ಯತೆಗಳು ಈಡೇರಲಿದ್ದು, ಪ್ರಯಾಣಿಕರಿಗೆ ಮತ್ತಷ್ಟು ಉತ್ತಮ ಸೌಲಭ್ಯಗಳನ್ನು ಕಲ್ಪಿಸಲು ಸಾಧ್ಯವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ರೈಲ್ವೆ ಇಲಾಖೆಯ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.