UK Express Logo

ಕಾರವಾರ ಮೆಡಿಕಲ್ ಕಾಲೇಜಿಗೆ ರಾಮಕೃಷ್ಣ ಹೆಗಡೆ ಹೆಸರು: ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

By UKExpress on 9/7/2026

ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ ಸ್ಮರಣೆಯನ್ನು ಶಾಶ್ವತಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವು ಮಹತ್ವದ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಶನಿವಾರ ನಡೆದ ರಾಮಕೃಷ್ಣ ಹೆಗಡೆ ಜನ್ಮಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿರುವ ವೈದ್ಯಕೀಯ ಶಿಕ್ಷಣ ಸಂಸ್ಥೆಗೆ ರಾಮಕೃಷ್ಣ ಹೆಗಡೆ ಅವರ ಹೆಸರಿಡಲು ಸರ್ಕಾರ ನಿರ್ಧರಿಸಿದೆ ಎಂದು ಪ್ರಕಟಿಸಿದರು.

ಇದೇ ವೇಳೆ, ಗ್ರಾಮೀಣ ಆಡಳಿತ ಮತ್ತು ಪಂಚಾಯತ್ ರಾಜ್ ವ್ಯವಸ್ಥೆಗೆ ರಾಮಕೃಷ್ಣ ಹೆಗಡೆ ನೀಡಿದ ಕೊಡುಗೆಯನ್ನು ಸ್ಮರಿಸುವ ಸಲುವಾಗಿ ಪ್ರತಿ ವರ್ಷ ಅವರ ಜನ್ಮದಿನದಂದು ‘ರಾಮಕೃಷ್ಣ ಹೆಗಡೆ ಶ್ರೇಷ್ಠ ಪಂಚಾಯತ್ ಪ್ರಶಸ್ತಿ’ ನೀಡುವ ಕುರಿತು ಆರ್‌ಡಿಪಿಆರ್ ಸಚಿವರೊಂದಿಗೆ ಚರ್ಚಿಸಿರುವುದಾಗಿ ತಿಳಿಸಿದರು.

ಅಲ್ಲದೆ, ಬೆಂಗಳೂರಿನ ಶಿವರಾಮ ಕಾರಂತ ಬಡಾವಣೆಯ ಪ್ರಮುಖ ರಸ್ತೆಯೊಂದಕ್ಕೂ ರಾಮಕೃಷ್ಣ ಹೆಗಡೆ ಅವರ ಹೆಸರಿಡಲು ನಿರ್ಧರಿಸಲಾಗಿದೆ ಎಂದರು.

ರಾಮಕೃಷ್ಣ ಹೆಗಡೆ ಅವರು ಕೇವಲ ಅಧಿಕಾರ ನಡೆಸಿದ ನಾಯಕರಲ್ಲ. ಪಂಚಾಯತ್‌ನಿಂದ ಸಂಸತ್ತಿನವರೆಗೆ ಹೊಸ ನಾಯಕತ್ವವನ್ನು ಬೆಳೆಸಿದ ದೂರದೃಷ್ಟಿಯ ನಾಯಕ ಎಂದು ಶಿವಕುಮಾರ್ ಬಣ್ಣಿಸಿದರು.

“ಒಬ್ಬ ನಾಯಕನ ಕೆಲಸ ಕೇವಲ ಹಿಂಬಾಲಕರನ್ನು ಸೃಷ್ಟಿಸುವುದಲ್ಲ; ನಾಯಕರನ್ನು ಸೃಷ್ಟಿಸುವುದೇ ನಿಜವಾದ ನಾಯಕತ್ವ” ಎಂಬ ಹೆಗಡೆ ಅವರ ಚಿಂತನೆ ಇಂದಿಗೂ ಪ್ರಸ್ತುತವಾಗಿದೆ ಎಂದರು.

ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಕರ್ನಾಟಕದ ಪ್ರಯೋಗಗಳು ದೇಶಕ್ಕೆ ಮಾದರಿಯಾಗಿದ್ದವು. ಇದೇ ಚಿಂತನೆ ಮುಂದಿನ ದಿನಗಳಲ್ಲಿ 73ನೇ ಮತ್ತು 74ನೇ ಸಂವಿಧಾನ ತಿದ್ದುಪಡಿಗಳಿಗೆ ಪ್ರೇರಣೆಯಾಯಿತು ಎಂದು ಹೇಳಿದರು.

ರಾಮಕೃಷ್ಣ ಹೆಗಡೆ ಅವರು ಜಾತಿ ಆಧಾರಿತ ರಾಜಕಾರಣಕ್ಕೆ ಸೀಮಿತವಾಗದೆ ಮೌಲ್ಯಾಧಾರಿತ ರಾಜಕಾರಣ, ಸಾಮಾಜಿಕ ನ್ಯಾಯ ಮತ್ತು ಅಭಿವೃದ್ಧಿಗೆ ಆದ್ಯತೆ ನೀಡಿದ್ದರು. ಅಧಿಕಾರವನ್ನು ಶಕ್ತಿಯ ಸಂಕೇತವಾಗಿ ನೋಡದೆ ಜನಸೇವೆಗೆ ದೊರೆತ ಅವಕಾಶವೆಂದು ಪರಿಗಣಿಸಿದ್ದರು ಎಂದು ಶಿವಕುಮಾರ್ ಸ್ಮರಿಸಿದರು.

ಕರ್ನಾಟಕದಲ್ಲಿ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಶಿಕ್ಷಣದ ವಿಸ್ತರಣೆಗೆ ಹೆಗಡೆ ಅವರ ಕಾಲದ ನೀತಿಗಳು ಸಹಕಾರಿಯಾಗಿವೆ. ಶಿಕ್ಷಣ ಮತ್ತು ಮಾನವ ಸಂಪನ್ಮೂಲವೇ ರಾಜ್ಯದ ಪ್ರಮುಖ ಆಸ್ತಿ ಎಂದು ಅವರು ಹೇಳಿದರು.

ರಾಮಕೃಷ್ಣ ಹೆಗಡೆ ಅವರು ದೇಶದ ಪ್ರಧಾನಿಯಾಗುವ ಅರ್ಹತೆ ಮತ್ತು ಅವಕಾಶ ಎರಡನ್ನೂ ಹೊಂದಿದ್ದ ನಾಯಕರು. ಆದರೆ ಕೆಲವು ಕಾರಣಗಳಿಂದ ಅದು ಸಾಧ್ಯವಾಗಲಿಲ್ಲ ಎಂದು ಶಿವಕುಮಾರ್ ಅಭಿಪ್ರಾಯಪಟ್ಟರು.

“ನಮ್ಮ ಸರ್ಕಾರ ರಾಮಕೃಷ್ಣ ಹೆಗಡೆ ಅವರ ಆಚಾರ-ವಿಚಾರ, ಮೌಲ್ಯಾಧಾರಿತ ರಾಜಕಾರಣ, ಪಂಚಾಯತ್ ರಾಜ್ ಮತ್ತು ಅಭಿವೃದ್ಧಿ ಚಿಂತನೆಗಳನ್ನು ಮುಂದುವರಿಸಿಕೊಂಡು ಹೋಗಲಿದೆ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.