ಕಾರವಾರ: ಜಿಲ್ಲೆಯ ಬ್ಯಾಂಕ್‌ಗಳಲ್ಲಿ ಸಾಲ ಮತ್ತು ಠೇವಣಿ ಅನುಪಾತವನ್ನು ಹೆಚ್ಚಿಸಲು ಎಲ್ಲಾ ಬ್ಯಾಂಕ್‌ಗಳಿಗೆ ನಿಗದಿತ ಗುರಿ ನೀಡಿ, ಗುರಿ ಸಾಧನೆಗೆ ಕ್ರಿಯಾ ಯೋಜನೆ ರೂಪಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಸೂಚಿಸಿದರು.
ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಗ್ರಣಿ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿವಿಧ ಸರ್ಕಾರಿ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಫಲಾನುಭವಿಗಳು ಸಲ್ಲಿಸಿರುವ ಅರ್ಜಿಗಳನ್ನು ತ್ವರಿತವಾಗಿ ಪರಿಶೀಲಿಸಿ, ಅರ್ಹರಿಗೆ ಆದ್ಯತೆಯ ಮೇರೆಗೆ ಸಾಲ ವಿತರಿಸುವ ಮೂಲಕ ಸಾಲ–ಠೇವಣಿ ಅನುಪಾತವನ್ನು ಸುಧಾರಿಸಬೇಕು ಎಂದು ಬ್ಯಾಂಕ್ ಅಧಿಕಾರಿಗಳಿಗೆ ತಿಳಿಸಿದರು.
ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಫಲಾನುಭವಿಗಳಿಂದ ಸಲ್ಲಿಕೆಯಾಗದೆ ಬಾಕಿ ಉಳಿದಿರುವ ಅರ್ಜಿಗಳನ್ನು ಕೂಡಲೇ ಬ್ಯಾಂಕ್‌ಗಳಿಗೆ ಸಲ್ಲಿಸುವಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು. ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಸೌಲಭ್ಯ ದೊರಕಿಸಿ, ಅವರನ್ನು ಆರ್ಥಿಕವಾಗಿ ಸದೃಢಗೊಳಿಸುವುದು ಯೋಜನೆಗಳ ಅನುಷ್ಠಾನ ಇಲಾಖೆಗಳ ಜವಾಬ್ದಾರಿಯಾಗಿದೆ ಎಂದರು.
ಜೂನ್ 2026ರ ಅಂತ್ಯಕ್ಕೆ ಜಿಲ್ಲೆಯ ಬ್ಯಾಂಕ್‌ಗಳಲ್ಲಿ ₹27,262 ಕೋಟಿ ಠೇವಣಿ ಸಂಗ್ರಹವಾಗಿದ್ದು, ₹12,778 ಕೋಟಿ ಸಾಲ ವಿತರಿಸಲಾಗಿದೆ. ಸಾಲ–ಠೇವಣಿ ಅನುಪಾತ ಶೇ.46.87ರಷ್ಟಿದೆ. ಪ್ರಸಕ್ತ ವರ್ಷದಲ್ಲಿ ಈ ಅನುಪಾತವನ್ನು ಉತ್ತಮಪಡಿಸಲು ಪ್ರತಿಯೊಂದು ಬ್ಯಾಂಕ್ ಪ್ರತ್ಯೇಕ ಕ್ರಿಯಾ ಯೋಜನೆ ರೂಪಿಸಿ ನಿಗದಿತ ಗುರಿ ಸಾಧಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ವಿವಿಧ ಸರ್ಕಾರಿ ಯೋಜನೆಗಳಡಿ ಬ್ಯಾಂಕ್‌ಗಳಿಂದ ನೀಡಲಾಗುತ್ತಿರುವ ಸಾಲ ಸೌಲಭ್ಯಗಳ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು.
ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಕರೀಂ ಅಸಾದಿ, ಮುಖ್ಯ ಯೋಜನಾಧಿಕಾರಿ ಸೋಮಶೇಖರ್ ಮೇಸ್ತಾ, ಕೆನರಾ ಬ್ಯಾಂಕ್ ಪ್ರಾದೇಶಿಕ ವ್ಯವಸ್ಥಾಪಕ ನಾಗರಾಜ್, ನಬಾರ್ಡ್ ಬ್ಯಾಂಕ್ ವ್ಯವಸ್ಥಾಪಕ ಸುಶೀಲ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ರಾಜಪ್ಪ, ಲೀಡ್ ಜಿಲ್ಲಾ ಅಧಿಕಾರಿ ಮೋನಿ ರಾಜ್ ಬ್ರಹ್ಮ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲಾ ಬ್ಯಾಂಕ್‌ಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
