
ಮುಂಡಗೋಡ: ತಾಲೂಕಿನ ಆಲಳ್ಳಿ ಗ್ರಾಮದಲ್ಲಿ ವೃದ್ಧ ಮಹಿಳೆಯನ್ನು ಕೊಲೆ ಮಾಡಿ ಚಿನ್ನಾಭರಣ ದೋಚಿದ ಪ್ರಕರಣವನ್ನು ಮುಂಡಗೋಡ ಪೊಲೀಸರು ಭೇದಿಸಿದ್ದು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆಲಳ್ಳಿ ಗ್ರಾಮದ ಕಮಲವ್ವ ತಿರಕಪ್ಪ ಆಡೂರ (75) ಅವರು ಅಕ್ಟೋಬರ್ 25ರ ರಾತ್ರಿ 8:34 ಗಂಟೆಯಿಂದ ಅಕ್ಟೋಬರ್ 26ರ ಬೆಳಗ್ಗೆ 6:30 ಗಂಟೆಯ ನಡುವಿನ ಅವಧಿಯಲ್ಲಿ ತಮ್ಮ ಮನೆಯಲ್ಲಿ ಮೃತಪಟ್ಟಿದ್ದರು. ಇದೇ ವೇಳೆ ಮನೆಯಲ್ಲಿದ್ದ ನಗದು ಹಣ ಹಾಗೂ ಚಿನ್ನಾಭರಣಗಳು ಕಾಣೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಮೃತರ ಪುತ್ರ ರಾಘವೇಂದ್ರ ಅವರು ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡು ಶಿರಸಿ ಉಪವಿಭಾಗದ ಅಧಿಕಾರಿಗಳು ಹಾಗೂ ಅಪರಾಧ ವಿಭಾಗದ ಸಿಬ್ಬಂದಿಗಳನ್ನೊಳಗೊಂಡ ವಿಶೇಷ ತಂಡ ರಚಿಸಿದ್ದರು. ಯಾವುದೇ ಸಿಸಿಟಿವಿ ದೃಶ್ಯಗಳು ಅಥವಾ ತಾಂತ್ರಿಕ ಸಾಕ್ಷ್ಯಗಳು ಲಭ್ಯವಿಲ್ಲದಿದ್ದರೂ, ಸ್ಥಳೀಯ ಮಾಹಿತಿದಾರರಿಂದ ಸಂಗ್ರಹಿಸಿದ ಸುಳಿವುಗಳ ಆಧಾರದ ಮೇಲೆ ತನಿಖೆ ಮುಂದುವರಿಸಿದ್ದರು.
ಕಾತೂರು ಹಾಗೂ ಹಾನಗಲ್ ವ್ಯಾಪ್ತಿಯ ಅರಣ್ಯ ಪ್ರದೇಶಗಳಲ್ಲಿ ಶೋಧ ಕಾರ್ಯ ನಡೆಸಿದ ಪೊಲೀಸರು, ಹಾವೇರಿ, ಮೈಸೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಳೆದ 15 ದಿನಗಳಿಂದ ನಿರಂತರ ಕಾರ್ಯಾಚರಣೆ ನಡೆಸಿದ್ದರು.
ಕೊನೆಗೆ ನವೆಂಬರ್ 13ರಂದು ಸಂಜೆ 6:30ರ ಸುಮಾರಿಗೆ ಹಾವೇರಿ ಜಿಲ್ಲೆಯ ಸವಣೂರಿನಲ್ಲಿ ಆಲಳ್ಳಿ ಗ್ರಾಮದ ಮಾರುತಿ ಅಡಿವೆಪ್ಪ ಮುಡಸಾಲಿ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಪೊಲೀಸರ ಪ್ರಕಾರ, ಆರೋಪಿತನು ನೀಡಿದ ಸ್ವಯಂಪ್ರೇರಿತ ಹೇಳಿಕೆಯ ಆಧಾರದ ಮೇಲೆ ಕಮಲವ್ವ ಅವರನ್ನು ಕೊಲೆ ಮಾಡಿರುವುದನ್ನು ಪತ್ತೆಹಚ್ಚಲಾಗಿದ್ದು, ಮೃತೆಯ ಮೈಮೇಲಿದ್ದ ಚಿನ್ನಾಭರಣಗಳು ಹಾಗೂ ಕೃತ್ಯಕ್ಕೆ ಬಳಸಿದ ಮೋಟಾರ್ ಸೈಕಲ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್. ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಜಿ. ಹಾಗೂ ಶಿರಸಿ ಉಪವಿಭಾಗದ ಡಿವೈಎಸ್ಪಿ ಗೀತಾ ಪಾಟೀಲ ಅವರ ಮಾರ್ಗದರ್ಶನದಲ್ಲಿ, ಮುಂಡಗೋಡ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಮೇಶ ಹೆಚ್. ಹನಾಪುರ, ಪಿಎಸ್ಐಗಳಾದ ಮಂಜುನಾಥ ಗೌಡರ (ಕಾನೂನು ಮತ್ತು ಸುವ್ಯವಸ್ಥೆ), ರವೀಂದ್ರ ಬಿರಾದರ (ತನಿಖೆ) ಹಾಗೂ ನಿಂಗರಾಜ ಕರಡಿಗುಡ್ಡಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.
ಶಿರಸಿ ಉಪವಿಭಾಗದ ಅಪರಾಧ ವಿಭಾಗದ ಸಿಬ್ಬಂದಿ ಬಸವರಾಜ ಹಗರಿ (ಶಿರಸಿ ನಗರ ಪೊಲೀಸ್ ಠಾಣೆ) ಹಾಗೂ ಕೊಟೇಶ್ವರ ನಾಗರವಳ್ಳಿ (ಶಿರಸಿ ಎನ್.ಎಂ. ಪೊಲೀಸ್ ಠಾಣೆ) ಮತ್ತು ಮುಂಡಗೋಡ ಪೊಲೀಸ್ ಠಾಣೆಯ ಬಸವರಾಜ ಮ್ಯಾಗೇರಿ, ಅಣ್ಣಪ್ಪ ಬುಡಗೇರಿ, ತಿರುಪತಿ ಚೌಡಣ್ಣನವರ ಹಾಗೂ ಬಸವರಾಜ ಮಾಳಪ್ಪನವರ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಇವರೆಲ್ಲರೂ ಪ್ರಮುಖ ಪಾತ್ರ ವಹಿಸಿದ್ದಾರೆ.
ಪ್ರಕರಣವನ್ನು ತ್ವರಿತವಾಗಿ ಭೇದಿಸಿ ಆರೋಪಿಯನ್ನು ಬಂಧಿಸುವಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ ಎಲ್ಲಾ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಅಭಿನಂದಿಸಿ ಪ್ರಶಂಸಿಸಿದ್ದಾರೆ.
ಒಂಟಿಯಾಗಿ ವಾಸಿಸುವ ಮಹಿಳೆಯರು ಹಾಗೂ ವೃದ್ಧರ ಬಗ್ಗೆ ಕುಟುಂಬದವರು ಹೆಚ್ಚಿನ ಕಾಳಜಿ ವಹಿಸಬೇಕು. ನಿರ್ಜನ ಪ್ರದೇಶಗಳಲ್ಲಿ ಸಂಚರಿಸುವಾಗ ಮಹಿಳೆಯರು ಆಭರಣಗಳ ಬಗ್ಗೆ ಎಚ್ಚರಿಕೆ ವಹಿಸಬೇಕು. ಅಕ್ಕಪಕ್ಕದ ಮನೆಯವರು ಒಂಟಿಯಾಗಿ ವಾಸಿಸುವ ಹಿರಿಯ ನಾಗರಿಕರ ಸುರಕ್ಷತೆಯ ಬಗ್ಗೆ ಗಮನಹರಿಸಬೇಕು. ಮನೆಗೆ ಬೀಗ ಹಾಕಿ ಹೊರಗೆ ಹೋಗುವಾಗ ಬೀಟ್ ಪೊಲೀಸರಿಗೆ ಮಾಹಿತಿ ನೀಡಬೇಕು. ಸಾಧ್ಯವಾದಲ್ಲಿ ಮನೆಗಳಿಗೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿಕೊಳ್ಳಬೇಕು ಎಂದು ಪೊಲೀಸರು ಸಲಹೆ ನೀಡಿದ್ದಾರೆ.
