
ಕಾರವಾರ: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಪರಿಸರ ಮಾಲಿನ್ಯ ಹಾಗೂ ಶಬ್ಧಮಾಲಿನ್ಯ ತಡೆಯುವ ಉದ್ದೇಶದಿಂದ ಜಿಲ್ಲೆಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಗಣೇಶ ಮೂರ್ತಿಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ. ಗಣೇಶ ವಿಸರ್ಜನೆ ಮೆರವಣಿಗೆ ಸೇರಿದಂತೆ ಯಾವುದೇ ಸಂದರ್ಭದಲ್ಲೂ ಡಿಜೆ ಬಳಕೆಗೆ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.
ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಾರ್ವಜನಿಕರು ಮಣ್ಣಿನಿಂದ ಹಾಗೂ ರಾಸಾಯನಿಕ ರಹಿತ ಬಣ್ಣಗಳಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನೇ ಪ್ರತಿಷ್ಠಾಪಿಸಬೇಕು. ಜಲಮೂಲಗಳು ಕಲುಷಿತವಾಗುವುದನ್ನು ತಡೆಯಲು ಮೂರ್ತಿಗಳನ್ನು ಸ್ಥಳೀಯ ಸಂಸ್ಥೆಗಳು ನಿಗದಿಪಡಿಸಿದ ಸಾರ್ವಜನಿಕ ಸ್ಥಳಗಳಲ್ಲಿ ಅಥವಾ ತಾತ್ಕಾಲಿಕವಾಗಿ ನಿರ್ಮಿಸಿರುವ ಕೃತಕ ಹೊಂಡಗಳಲ್ಲಿ ಮಾತ್ರ ವಿಸರ್ಜಿಸಬೇಕು ಎಂದು ಸೂಚಿಸಿದರು.
ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಧ್ವನಿವರ್ಧಕ ಬಳಕೆಗೆ ಸಂಪೂರ್ಣ ನಿಷೇಧವಿದ್ದು, ನಿಗದಿತ ಅವಧಿಯಲ್ಲಿ ಶಬ್ಧಮಾಲಿನ್ಯವಾಗದಂತೆ ಧ್ವನಿವರ್ಧಕ ಬಳಸಬೇಕು. ಗಣೇಶ ವಿಸರ್ಜನೆ ಮೆರವಣಿಗೆ ಸೇರಿದಂತೆ ಯಾವುದೇ ಸ್ಥಳದಲ್ಲಿ ಡಿಜೆ ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಪೊಲೀಸ್ ಇಲಾಖೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಂದ ಅಗತ್ಯ ಪೂರ್ವಾನುಮತಿ ಪಡೆಯಬೇಕು. ಪ್ರತಿಷ್ಠಾಪನಾ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಸಿ, ಸ್ವಯಂಸೇವಕರನ್ನು ನಿಯೋಜಿಸಬೇಕು. ಪ್ರಸಾದ ಹಾಗೂ ಕುಡಿಯುವ ನೀರು ವಿತರಣೆಯಲ್ಲಿ ಸ್ವಚ್ಛತೆ ಕಾಪಾಡುವಂತೆ ಆಯೋಜಕರಿಗೆ ಸೂಚಿಸಬೇಕು. ಅನುಮತಿಗಳನ್ನು ಸರಳವಾಗಿ ಒದಗಿಸಲು ಸಿಂಗಲ್ ವಿಂಡೋ ವ್ಯವಸ್ಥೆ ಮೂಲಕ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಗಣೇಶ ಪೆಂಡಾಲ್‌ಗಳಲ್ಲಿ ವಿದ್ಯುತ್ ಹಾಗೂ ಅಗ್ನಿ ಸುರಕ್ಷತಾ ಕ್ರಮಗಳನ್ನು ಹೆಸ್ಕಾಂ ಮತ್ತು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಪರಿಶೀಲಿಸಬೇಕು. ಹಬ್ಬದ ಸಂದರ್ಭದಲ್ಲಿ ಈಗಾಗಲೇ ಅನುಮತಿ ಪಡೆದವರು ನಿಗದಿತ ಸ್ಥಳಗಳಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು ಎಂದರು.
ಪಿಒಪಿ ಗಣೇಶ ಮೂರ್ತಿಗಳ ನಿಷೇಧ ಹಾಗೂ ವಿಸರ್ಜನೆ ನಿಯಮಗಳ ಕುರಿತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸ್ವಚ್ಛತಾ ವಾಹನಗಳ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಪ್ಲಾಸ್ಟಿಕ್, ಜಲ, ಪರಿಸರ ಹಾಗೂ ಶಬ್ಧ ಮಾಲಿನ್ಯ ಮುಕ್ತವಾಗಿ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸುವಂತೆ ಜಿಲ್ಲೆಯ ಜನತೆಗೆ ಮನವಿ ಮಾಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಭಟ್ಕಳ ವಿಭಾಗದ ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಣು ಗುಪ್ತಾ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಜಿ.ಪಂ. ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್, ಜಿಲ್ಲಾ ಪರಿಸರ ಅಧಿಕಾರಿ ಡಾ. ಗಣಪತಿ ಹೆಗಡೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ವರ್ಚುವಲ್ ಮೂಲಕ ವಿವಿಧ ವಿಭಾಗಗಳ ಡಿವೈಎಸ್ಪಿಗಳು, ತಹಸೀಲ್ದಾರ್‌ಗಳು ಹಾಗೂ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು ಭಾಗವಹಿಸಿದ್ದರು.
