UK Express Logo

ಪ್ರಜಾ ಸೇವಾ ಸಭೆಯಲ್ಲಿ ಸಲ್ಲಿಕೆಯಾಗುವ ಎಲ್ಲಾ ಅರ್ಜಿಗಳಿಗೆ ಸೂಕ್ತ ಸ್ಪಂದನೆ: ಶಾಸಕ ಮಂಕಾಳ ವೈದ್ಯ ಭರವಸೆ

By UKExpress on 11/15/2026

ಭಟ್ಕಳ: ಪ್ರಜಾ ಸೇವಾ ಆಂದೋಲನದಲ್ಲಿ ಸಾರ್ವಜನಿಕರಿಂದ ಸ್ವೀಕರಿಸಲಾಗುವ ಎಲ್ಲಾ ಅರ್ಜಿಗಳನ್ನು ಕಾನೂನುಬದ್ಧವಾಗಿ ಪರಿಶೀಲಿಸಿ ವಿಲೇವಾರಿ ಮಾಡಲಾಗುವುದು. ಪ್ರತಿಯೊಂದು ಅರ್ಜಿಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸಮರ್ಪಕವಾಗಿ ಸ್ಪಂದಿಸಲಿದ್ದಾರೆ ಎಂದು ವಿಧಾನಸಭಾ ಉಪಾಧ್ಯಕ್ಷ ಹಾಗೂ ಭಟ್ಕಳ-ಹೊನ್ನಾವರ ಕ್ಷೇತ್ರದ ಶಾಸಕ ಮಂಕಾಳ ಎಸ್. ವೈದ್ಯ ಭರವಸೆ ನೀಡಿದರು.

ಭಟ್ಕಳ ತಾಲೂಕಿನ ಬೆಳಕೆ ಹೋಬಳಿಯ ಬೊಮ್ಮನಕೇರಿ ದೇವಸ್ಥಾನದ ಸಭಾಂಗಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಭಟ್ಕಳ ನಗರಸಭೆ ಹಾಗೂ ಜಾಲಿ ಪಟ್ಟಣ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ಶನಿವಾರ ಆಯೋಜಿಸಿದ್ದ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಅವರು ಮಾತನಾಡಿದರು.

ಸರ್ಕಾರಿ ಕೆಲಸಗಳಿಗಾಗಿ ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಮುಖ್ಯಮಂತ್ರಿಗಳ ಆಶಯದಂತೆ 'ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ' ಎಂಬ ಧ್ಯೇಯವಾಕ್ಯದೊಂದಿಗೆ ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಪ್ರಜಾ ಸೇವಾ ಆಂದೋಲನ ಆಯೋಜಿಸಲಾಗುತ್ತಿದೆ. ಈ ಕಾರ್ಯಕ್ರಮ ಕೇವಲ ಔಪಚಾರಿಕ ಕಾರ್ಯಕ್ರಮವಾಗಿರದೆ, ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿರಂತರ ಪ್ರಯತ್ನವಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಸಲ್ಲಿಕೆಯಾಗುವ ಪ್ರತಿಯೊಂದು ಅರ್ಜಿಯನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಪರಿಶೀಲಿಸಿ ಉತ್ತರ ನೀಡಬೇಕು. ಮುಖ್ಯಮಂತ್ರಿಗಳ ಮಹತ್ವಾಕಾಂಕ್ಷೆಯ ಈ ಯೋಜನೆಗಾಗಿ ಪ್ರತ್ಯೇಕ ಇಲಾಖೆಯನ್ನೇ ಸೃಜಿಸಲಾಗಿದ್ದು, ಸಾರ್ವಜನಿಕರ ಮನವಿಗಳನ್ನು ನಿರ್ಲಕ್ಷಿಸದೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ರಾಜ್ಯದಲ್ಲಿ ಬರ ನಿರ್ವಹಣೆಗೆ ಸರ್ಕಾರ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆಗಾಗಿ ಈಗಾಗಲೇ ಪ್ರತಿ ತಾಲೂಕಿಗೆ ₹1 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಮೇವಿನ ಕಿಟ್ ವಿತರಣೆ ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕುಡಿಯುವ ನೀರು, ರಸ್ತೆ, ಪೌತಿ ಖಾತೆ, ನಿವೇಶನ, ಅರಣ್ಯ ಭೂಮಿ, ವಸತಿ ಸಮಸ್ಯೆ, ಮೊಗೇರ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆಗೊಳಿಸುವುದು ಹಾಗೂ ಸಿಂಧುತ್ವ ಪ್ರಮಾಣಪತ್ರ ವಿತರಣೆ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದ 85ಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಲಾಯಿತು. ಸ್ವೀಕರಿಸಿದ ಎಲ್ಲಾ ಅರ್ಜಿಗಳನ್ನು 15 ದಿನಗಳೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಹರ್ಷಲ್ ಬೊಯರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಡಿಸಿಎಫ್ ಯೋಗೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಉಪವಿಭಾಗಾಧಿಕಾರಿ ಮಹೇಶ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸುನೀಲ್, ಭಟ್ಕಳ ತಹಶೀಲ್ದಾರ್ ಉಷಾ ಎಸ್. ಪಾವಸ್ಕರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಜನಾರ್ದನ ದೇವಾಡಿಗ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರಾಜು ನಾಯ್ಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.