
ಕಾರವಾರ: ಜಿಲ್ಲೆಯ ಜನತೆಯ ಅಹವಾಲುಗಳನ್ನು ಆಲಿಸಿ, ಅವರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸುವ ಉದ್ದೇಶದಿಂದ ಸೆಪ್ಟೆಂಬರ್ 5ರಂದು ಅಂಕೋಲಾದ ಸ್ವಾತಂತ್ರ್ಯ ಸಂಗ್ರಾಮ ಭವನದಲ್ಲಿ ತಾಲ್ಲೂಕು ಮಟ್ಟದ ‘ಪ್ರಜಾಸೇವೆ ಆಂದೋಲನ’ ಸಭೆ ಆಯೋಜಿಸಲಾಗಿದೆ.
ಸಭೆಯನ್ನು ಯಶಸ್ವಿಯಾಗಿ ನಡೆಸಲು ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚಿಸಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಜಾಸೇವೆ ಆಂದೋಲನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ‘ಗ್ರಾಮ ಒನ್’ ಕೌಂಟರ್‌ಗಳನ್ನು ಸ್ಥಾಪಿಸಿ, ಯಾವುದೇ ಶುಲ್ಕವಿಲ್ಲದೆ ಸಾರ್ವಜನಿಕರ ಅರ್ಜಿಗಳನ್ನು ಆನ್‌ಲೈನ್ ಮೂಲಕ ನೋಂದಾಯಿಸಿಕೊಳ್ಳಲು ವ್ಯವಸ್ಥೆ ಮಾಡಬೇಕು. ಕುಂದುಕೊರತೆಗಳು ಇತ್ಯರ್ಥಗೊಂಡ ಫಲಾನುಭವಿಗಳಿಗೆ ಸ್ಥಳದಲ್ಲಿಯೇ ಅನುಮೋದನಾ ಪತ್ರ ಹಾಗೂ ಪರಿಹಾರ ಪ್ರಮಾಣಪತ್ರ ವಿತರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಸಾರ್ವಜನಿಕರಿಗೆ ಕುಡಿಯುವ ನೀರು ಹಾಗೂ ಮೂಲಭೂತ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಬೇಕು. ನಿರಂತರ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಕಾರ್ಯಕ್ರಮಕ್ಕೆ ಸಾರ್ವಜನಿಕರು ಆಗಮಿಸಲು ಅನುಕೂಲವಾಗುವಂತೆ ಬಸ್ ವ್ಯವಸ್ಥೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಸಭೆ ನಡೆಯುವ ಸ್ಥಳದಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಕುರಿತು ಪ್ರಮುಖ ಇಲಾಖೆಗಳ ವತಿಯಿಂದ ವಸ್ತು ಪ್ರದರ್ಶನ ಹಾಗೂ ಮಾಹಿತಿ ಮಳಿಗೆಗಳನ್ನು ಸ್ಥಾಪಿಸಬೇಕು. ಈ ಮೂಲಕ ಸಾರ್ವಜನಿಕರಿಗೆ ಇಲಾಖೆಗಳ ಸೌಲಭ್ಯಗಳು ಮತ್ತು ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.
ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಪ್ರತ್ಯೇಕ ಕೌಂಟರ್‌ಗಳನ್ನು ತೆರೆಯಬೇಕು. ಸಾರ್ವಜನಿಕರಿಗೆ ಅಗತ್ಯ ಅರ್ಜಿ ನಮೂನೆಗಳನ್ನು ನೀಡಿ, ಸ್ಥಳದಲ್ಲಿಯೇ ಹೆಸರು ನೋಂದಾಯಿಸಲು ಅವಕಾಶ ಕಲ್ಪಿಸಬೇಕು ಎಂದು ತಿಳಿಸಿದರು.
ಭಟ್ಕಳ ತಾಲೂಕಿನ ಮುರುಡೇಶ್ವರ, ಶಿರಸಿ ತಾಲೂಕಿನ ಜಾನ್ಮನೆ, ಯಲ್ಲಾಪುರ ತಾಲೂಕಿನ ಮಂಚಿಕೇರಿ, ಹಳಿಯಾಳ ತಾಲೂಕಿನ ಸಾಂಬ್ರಾಣಿ ಹಾಗೂ ಕುಮಟಾ ತಾಲೂಕಿನ ಕೂಜಳ್ಳಿ ಹೋಬಳಿಗಳಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಹೋಬಳಿ ಮಟ್ಟದ ‘ಪ್ರಜಾಸೇವೆ ಆಂದೋಲನ’ ಸಭೆಗಳನ್ನು ಆಯೋಜಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಾರ್ವಜನಿಕರ ಬಳಿಗೇ ತೆರಳಿ ಅವರ ಸಮಸ್ಯೆಗಳನ್ನು ಆಲಿಸಿ, ತುರ್ತು ಸ್ಪಂದನೆ ನೀಡುವ ಸರ್ಕಾರದ ಈ ಜನಪರ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಹಾಗೂ ಯಶಸ್ವಿಯಾಗಿ ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿ ಸಂಬಂಧಪಟ್ಟ ಎಲ್ಲ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಸೇರಿದಂತೆ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
