ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಸಿಇಟಿ, ನೀಟ್, ಜೆಇಇ ಕೋಚಿಂಗ್: ಸತೀಶ ಸೈಲ್

ಕಾರವಾರ: ಸರ್ಕಾರಿ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ಅನುಕೂಲವಾಗುವಂತೆ ಸರ್ಕಾರವು ಸಿಇಟಿ, ನೀಟ್ ಹಾಗೂ ಜೆಇಇ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡುತ್ತಿದೆ ಎಂದು ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಏಜೆನ್ಸಿ ಲಿಮಿಟೆಡ್ ಅಧ್ಯಕ್ಷ ಹಾಗೂ ಶಾಸಕ ಸತೀಶ ಕೆ. ಸೈಲ್ ಹೇಳಿದರು.
ಕಾರವಾರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ 2026–27ನೇ ಸಾಲಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ಪ್ರಥಮ ಬಾರಿಗೆ ಆರಂಭಿಸಲಾದ ಆಫ್‌ಲೈನ್ ಇಂಟಿಗ್ರೇಟೆಡ್ ಸಿಇಟಿ ಕೋಚಿಂಗ್ ತರಗತಿಗಳ ಉದ್ಘಾಟನಾ ಸಮಾರಂಭದಲ್ಲಿ ಶುಕ್ರವಾರ ಅವರು ಮಾತನಾಡಿದರು.
ಕಾರವಾರದ ಸರ್ಕಾರಿ ಪದವಿಪೂರ್ವ ಕಾಲೇಜು ರಾಜ್ಯದಲ್ಲಿಯೇ ಮಾದರಿ ಕಾಲೇಜು ಎಂದು ಗುರುತಿಸಿಕೊಂಡಿದ್ದು, ಇಲ್ಲಿ 1,258 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಉನ್ನತ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಕಾಲೇಜನ್ನು ಸಿಇಟಿ ತರಬೇತಿ ಕಾರ್ಯಕ್ರಮಕ್ಕೆ ಆಯ್ಕೆ ಮಾಡಲಾಗಿದೆ ಎಂದರು.
ಕಾಲೇಜಿನ ಉಪನ್ಯಾಸಕರು ಉತ್ತಮವಾಗಿ ಬೋಧನೆ ಮಾಡುವ ಮೂಲಕ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಅತಿಥಿ ಉಪನ್ಯಾಸಕರ ವೇತನ ಹೆಚ್ಚಳದ ಕುರಿತು ಮುಖ್ಯಮಂತ್ರಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಚಿವರ ಗಮನಕ್ಕೆ ತಂದು, ವೇತನ ಹೆಚ್ಚಳಕ್ಕೆ ಪ್ರಯತ್ನಿಸಲಾಗುವುದು ಎಂದು ಸತೀಶ್ ಸೈಲ್ ತಿಳಿಸಿದರು.
ವಿದ್ಯಾರ್ಥಿಗಳು ಕೃತಕ ಬುದ್ಧಿಮತ್ತೆ (ಎಐ) ಹಾಗೂ ಚಾಟ್‌ಜಿಪಿಟಿಯನ್ನು ದುರ್ಬಳಕೆ ಮಾಡಿಕೊಳ್ಳದೆ, ಸ್ವಂತ ಜ್ಞಾನ ಮತ್ತು ಚಿಂತನಾ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು. ಪಿಯುಸಿ ಶಿಕ್ಷಣವು ಮುಂದಿನ ಉನ್ನತ ಶಿಕ್ಷಣಕ್ಕೆ ಬುನಾದಿಯಾಗಿರುವುದರಿಂದ ಪಾಲಕರು ಮಕ್ಕಳ ಶಿಕ್ಷಣದ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಸಲಹೆ ನೀಡಿದರು.
ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸುವುದಷ್ಟೇ ಮುಖ್ಯವಲ್ಲ. ವಿದ್ಯಾರ್ಥಿಗಳು ಸಂವಹನ ಕಲೆ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳನ್ನು ಬೆಳೆಸಿಕೊಳ್ಳಬೇಕು. ವೇದಿಕೆ ಭಯ ಹೋಗಲಾಡಿಸಲು ಸಂಗೀತ, ಸಾಹಿತ್ಯ ಸೇರಿದಂತೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದರು.
ಕಾಲೇಜಿನ ಪ್ರಾಂಶುಪಾಲ ರಮೇಶ್ ಎಸ್. ಪತ್ರೇಕರ್ ಮಾತನಾಡಿ, ಸರ್ಕಾರ ಜಾರಿಗೊಳಿಸಿದ್ದ ಆನ್‌ಲೈನ್ ತರಬೇತಿಗಳು ನಿರೀಕ್ಷಿತ ಮಟ್ಟದಲ್ಲಿ ಯಶಸ್ವಿಯಾಗದ ಹಿನ್ನೆಲೆಯಲ್ಲಿ, ಇದೀಗ ಆಯಾ ಕಾಲೇಜುಗಳಲ್ಲಿಯೇ ಉಪನ್ಯಾಸಕರ ಮೂಲಕ ಸಿಇಟಿ, ನೀಟ್ ಹಾಗೂ ಜೆಇಇ ತರಬೇತಿ ನೀಡುವ ವ್ಯವಸ್ಥೆ ಜಾರಿಗೆ ತರಲಾಗಿದೆ ಎಂದರು.
ಪ್ರಥಮ ಪಿಯುಸಿಯಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ವಿದ್ಯಾರ್ಥಿಗಳಿಗೆ ಕಲ್ಪನೆ ಹಾಗೂ ಸೂಕ್ತ ಮಾರ್ಗದರ್ಶನ ದೊರೆಯುವುದರಿಂದ ಅವರ ಭವಿಷ್ಯಕ್ಕೆ ಇದು ದೊಡ್ಡ ಬೆಂಬಲವಾಗಲಿದೆ ಎಂದು ಹೇಳಿದರು.
ಪ್ರತಿ ಅಧ್ಯಾಯ ಪೂರ್ಣಗೊಂಡ ಬಳಿಕ ಯುನಿಟ್ ಪರೀಕ್ಷೆ ನಡೆಸಿ, ವಿದ್ಯಾರ್ಥಿಗಳ ಪ್ರಗತಿ ವರದಿಯನ್ನು ಪೋಷಕರಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸುವಲ್ಲಿ ಉಪನ್ಯಾಸಕರ ಜತೆಗೆ ಪೋಷಕರು ಪ್ರಮುಖ ಸ್ತಂಭಗಳಾಗಿದ್ದು, ಮಕ್ಕಳ ಶಿಕ್ಷಣದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಜಿ.ಪಿ. ನಾಯ್ಕ, ಹಿರಿಯ ಉಪನ್ಯಾಸಕರಾದ ಸತೀಶ ಜಿ. ಬಿಳ್ಕೋಡಿ, ವಿದ್ಯಾ ಕೌರೆ, ಉಪನ್ಯಾಸಕರು, ಪಾಲಕರು, ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.
