UK Express Logo

ಶಿರಸಿ–ಕುಮಟಾ ರಸ್ತೆಯಲ್ಲಿ ಅಪಘಾತ; ಮರಕ್ಕೆ ಡಿಕ್ಕಿ ಹೊಡೆದ ಕಾರು, ಚಾಲಕ ಸೇರಿ ಪ್ರಯಾಣಿಕರಿಗೆ ಗಾಯ

By UKExpress on 10/2/2026

ಶಿರಸಿ: ಶಿರಸಿ–ಕುಮಟಾ ರಸ್ತೆಯ ಸಂಪಖಂಡ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಕಾರಿನಲ್ಲಿದ್ದ ಇತರ ಪ್ರಯಾಣಿಕರಿಗೂ ಗಾಯಗಳಾಗಿವೆ.

ಬೆಂಗಳೂರು ಮೂಲದವರು ಪ್ರಯಾಣಿಸುತ್ತಿದ್ದ ಕಾರು ಶಿರಸಿಯಿಂದ ಕುಮಟಾ ಕಡೆಗೆ ತೆರಳುತ್ತಿದ್ದ ವೇಳೆ ಸಂಪಖಂಡ ಬಳಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದಿದ್ದು, ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

ಅಪಘಾತದಲ್ಲಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಕಾರಿನಲ್ಲಿದ್ದ ಇತರ ಪ್ರಯಾಣಿಕರಿಗೂ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎನ್ನಲಾಗಿದೆ.

ಅಪಘಾತದ ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ಹಾಗೂ ಗಾಯಾಳುಗಳ ಸಂಪೂರ್ಣ ವಿವರ ಪೊಲೀಸ್ ತನಿಖೆಯ ಬಳಿಕ ತಿಳಿದುಬರಬೇಕಿದೆ.

ಇದೇ ವೇಳೆ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದಿರುವುದೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಾಹನ ಸವಾರರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಾಮಗಾರಿಯನ್ನು ವೈಜ್ಞಾನಿಕವಾಗಿ ಕೈಗೊಳ್ಳಬೇಕು ಹಾಗೂ ಅಪಘಾತಕ್ಕೆ ಕಾರಣವಾಗುವ ರೀತಿಯ ಕಾಮಗಾರಿಯನ್ನು ಕೂಡಲೇ ಸರಿಪಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.