
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಬೇಡ್ಕಣಿಯ ಪ್ರತಿಭಾನ್ವಿತ ಕ್ರೀಡಾಪಟು ತೇಜಸ್ ಶ್ರೀಧರ್ ನಾಯ್ಕ್ ಅವರು ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗುವ ಮೂಲಕ ತಾಲೂಕಿಗೆ ಹಾಗೂ ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ.
ಚಿಕ್ಕಮಗಳೂರಿನ ಸೇಂಟ್ ಮೇರೀಸ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ ತೇಜಸ್ ನಾಯ್ಕ್, ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ CISCE (Council for the Indian School Certificate Examinations) ರಾಜ್ಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದ ಹ್ಯಾಮರ್ ಥ್ರೋ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ.
ಹ್ಯಾಮರ್ ಥ್ರೋ ಸ್ಪರ್ಧೆಯಲ್ಲಿ 52.56 ಮೀಟರ್ ದೂರ ಎಸೆದು ಪ್ರಥಮ ಸ್ಥಾನ ಪಡೆದುಕೊಂಡ ತೇಜಸ್, ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ ರಾಜ್ಯ ಮಟ್ಟದಲ್ಲಿ ತಮ್ಮ ಕ್ರೀಡಾ ಪ್ರತಿಭೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.
ಇದಕ್ಕೂ ಮುನ್ನ ನಡೆದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲೂ ಪ್ರಥಮ ಸ್ಥಾನ ಪಡೆದುಕೊಂಡಿದ್ದ ತೇಜಸ್, ಇದೀಗ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ಹರಿಯಾಣದಲ್ಲಿ ನಡೆಯಲಿರುವ ಪ್ರತಿಷ್ಠಿತ ರಾಷ್ಟ್ರ ಮಟ್ಟದ SGFI ಕ್ರೀಡಾಕೂಟಕ್ಕೆ ಅರ್ಹತೆ ಪಡೆದುಕೊಂಡಿದ್ದಾರೆ.
ತರಬೇತುದಾರರಾದ ಹರ್ಷ ಚಂದಾವರ್ಕರ್ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆಯುತ್ತಿರುವ ತೇಜಸ್ ನಾಯ್ಕ್ ಅವರ ಈ ಸಾಧನೆಗೆ ಸೇಂಟ್ ಮೇರೀಸ್ ಇಂಟರ್‌ನ್ಯಾಷನಲ್ ಶಾಲೆಯ ಆಡಳಿತ ಮಂಡಳಿ, ಉಪನ್ಯಾಸಕ ವೃಂದ, ಕ್ರೀಡಾಭಿಮಾನಿಗಳು ಹಾಗೂ ಬೇಡ್ಕಣಿ ಗ್ರಾಮದ ನಾಗರಿಕರು ಹರ್ಷ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲೂ ತೇಜಸ್ ಉತ್ತಮ ಪ್ರದರ್ಶನ ನೀಡಿ ಜಿಲ್ಲೆಗೆ ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ.
