UK Express Logo

ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ಪಾರದರ್ಶಕವಾಗಿ ನಡೆಸಲು ಕಟ್ಟುನಿಟ್ಟಿನ ಕ್ರಮ: ಜಿಲ್ಲಾಧಿಕಾರಿ

By UKExpress on 9/9/2026

ಕಾರವಾರ: ಜಿಲ್ಲೆಯಲ್ಲಿ ಸೆಪ್ಟೆಂಬರ್ 6ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಯಲಿರುವ ಪೊಲೀಸ್ ಕಾನ್ಸ್‌ಟೇಬಲ್‌ (ಸಿಎಆರ್/ಡಿಎಆರ್) ಹುದ್ದೆಗಳ ನೇರ ನೇಮಕಾತಿ ಪರೀಕ್ಷೆಯನ್ನು ಯಾವುದೇ ಅಕ್ರಮಗಳಿಗೆ ಅವಕಾಶವಿಲ್ಲದಂತೆ ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಾರವಾರದ 4 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 1,309 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಎಲ್ಲ ಕೇಂದ್ರಗಳಲ್ಲೂ ಸಿಸಿಟಿವಿ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವೆಬ್‌ಕಾಸ್ಟಿಂಗ್ ವೀಕ್ಷಣೆಗೆ ವ್ಯವಸ್ಥೆ ಮಾಡಬೇಕು ಎಂದರು.

ಪ್ರಶ್ನೆಪತ್ರಿಕೆ ಮತ್ತು ಉತ್ತರ ಪತ್ರಿಕೆಗಳ ಸಾಗಾಟ ವಾಹನಗಳಿಗೆ ಹಾಗೂ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸಬೇಕು. ಅಭ್ಯರ್ಥಿಗಳಿಗೆ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು ಎಂದು ತಿಳಿಸಿದರು.

ಪರೀಕ್ಷಾ ದಿನದಂದು ಅಭ್ಯರ್ಥಿಗಳಿಗೆ ಸಾರಿಗೆ ಸಮಸ್ಯೆಯಾಗದಂತೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಹಾಗೂ ಪರೀಕ್ಷಾ ಕೇಂದ್ರಗಳ ಸಮೀಪ ಬಸ್ ನಿಲುಗಡೆಗೆ ಕ್ರಮ ಕೈಗೊಳ್ಳುವಂತೆ ಸಾರಿಗೆ ಸಂಸ್ಥೆ ಅಧಿಕಾರಿಗಳಿಗೆ ಸೂಚಿಸಿದರು. ಪರೀಕ್ಷಾ ಅವಧಿಯಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಹೆಸ್ಕಾಂ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು ಎಂದರು.

ಪರೀಕ್ಷಾ ಪ್ರಾಧಿಕಾರದ ಮಾರ್ಗಸೂಚಿಯಂತೆ ಅಭ್ಯರ್ಥಿಗಳ ಡ್ರೆಸ್‌ಕೋಡ್, ಗುರುತಿನ ಚೀಟಿ ಹಾಗೂ ನಿಷೇಧಿತ ವಸ್ತುಗಳ ಪರಿಶೀಲನೆ ನಡೆಸಬೇಕು. ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಿರುವ ವೀಕ್ಷಕರು ಹಾಗೂ ಮೇಲ್ವಿಚಾರಕರು ತಮ್ಮ ಜವಾಬ್ದಾರಿಯನ್ನು ಅರಿತು ಕರ್ತವ್ಯ ನಿರ್ವಹಿಸಬೇಕು ಎಂದು ಹೇಳಿದರು.

ಅಭ್ಯರ್ಥಿಗಳು ಹಾಗೂ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿತ ಸಿಬ್ಬಂದಿ ಹೊರತುಪಡಿಸಿ ಯಾರಿಗೂ ಪರೀಕ್ಷಾ ಕೇಂದ್ರದೊಳಗೆ ಪ್ರವೇಶವಿಲ್ಲ. ಮಾಧ್ಯಮಗಳಿಗೂ ಕೇಂದ್ರದ ಒಳಗೆ ಪ್ರವೇಶ ನಿರ್ಬಂಧಿಸಲಾಗಿದೆ. ಮೊಬೈಲ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಅಭ್ಯರ್ಥಿಗಳು ಪರೀಕ್ಷೆ ಆರಂಭಕ್ಕೂ ಮುನ್ನವೇ ಕೇಂದ್ರಕ್ಕೆ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಅಕ್ರಮ ತಡೆಗೆ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲು ಮತ್ತು ಕೃತಕ ಬುದ್ಧಿಮತ್ತೆ ಆಧಾರಿತ ಮುಖ ಗುರುತಿಸುವಿಕೆ ವ್ಯವಸ್ಥೆ ಅಳವಡಿಸಲಾಗುತ್ತಿದೆ. ಅಭ್ಯರ್ಥಿಗಳು ಪರೀಕ್ಷಾ ಪ್ರಾಧಿಕಾರ ನಿಗದಿಪಡಿಸಿರುವ ಡ್ರೆಸ್‌ಕೋಡ್ ಪಾಲಿಸುವಂತೆ ಸೂಚಿಸಲಾಗಿದೆ.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪ ವಿಭಾಗಾಧಿಕಾರಿ ಶಾಲಂ ಹುಸೇನ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸತೀಶ್ ನಾಯ್ಕ ಸೇರಿದಂತೆ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿತ ಅಧಿಕಾರಿಗಳು ಉಪಸ್ಥಿತರಿದ್ದರು.