UK Express Logo
BREAKING

ಸುಷ್ಮಾ ರೆಡ್ಡಿ ಮನವಿಗೆ ಸ್ಪಂದನೆ: ಕುಮಟಾದ 5 ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ₹10 ಲಕ್ಷ ಅನುದಾನ

By UKExpress on 11/15/2026

ಕುಮಟಾ: ತಾಲೂಕಿನ ಗ್ರಾಮೀಣ ಭಾಗದ ಐದು ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಮೂಲಸೌಕರ್ಯ ಸುಧಾರಣೆಗಾಗಿ ವಿಧಾನ ಪರಿಷತ್ ಸದಸ್ಯ ವಿನಯ ಕಾರ್ತಿಕ ಪ್ರಕಾಶ ಅವರು ತಮ್ಮ 2026-27ನೇ ಸಾಲಿನ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಒಟ್ಟು ₹10 ಲಕ್ಷ ಅನುದಾನ ಮಂಜೂರು ಮಾಡಿದ್ದಾರೆ.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುಷ್ಮಾ ರಾಜಗೋಪಾಲ ರೆಡ್ಡಿ ಅವರು ತಾಲೂಕಿನ ವಿವಿಧ ಸರ್ಕಾರಿ ಶಾಲೆಗಳ ದುರಸ್ತಿ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ಅನುದಾನ ಬಿಡುಗಡೆ ಮಾಡುವಂತೆ ವಿನಯ ಕಾರ್ತಿಕ ಪ್ರಕಾಶ ಅವರಿಗೆ ಮನವಿ ಸಲ್ಲಿಸಿದ್ದರು. ಈ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಅವರು ಐದು ಶಾಲೆಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಿದ್ದಾರೆ.

ಹುಬ್ಬಣಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದುರಸ್ತಿ ಕಾಮಗಾರಿಗೆ ₹1.50 ಲಕ್ಷ, ಹೆಗಡೆ ತಾರಿಬಾಗಿಲು ಸರ್ಕಾರಿ ಪ್ರಾಥಮಿಕ ಶಾಲೆಯ ದುರಸ್ತಿಗೆ ₹1.50 ಲಕ್ಷ, ವಾಲಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೆಲಗೋಡು ಸರ್ಕಾರಿ ಪ್ರಾಥಮಿಕ ಶಾಲೆಯ ದುರಸ್ತಿಗೆ ₹2 ಲಕ್ಷ, ಅಳಕೋಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕತಗಾಲ ಎಸ್‌ಪಿ ಪ್ರೌಢಶಾಲೆಯ ದುರಸ್ತಿಗೆ ₹2 ಲಕ್ಷ ಹಾಗೂ ಮಿರ್ಜಾನ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಉರ್ದು ಪ್ರೌಢಶಾಲೆಯ ಮೇಲ್ಛಾವಣಿ ದುರಸ್ತಿಗೆ ₹3 ಲಕ್ಷ ಅನುದಾನ ಮಂಜೂರು ಮಾಡಲಾಗಿದೆ.

ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಕಲಿಕಾ ವಾತಾವರಣ ನಿರ್ಮಿಸುವುದು ಹಾಗೂ ಮೂಲಸೌಕರ್ಯ ಸುಧಾರಿಸುವ ನಿಟ್ಟಿನಲ್ಲಿ ಈ ಅನುದಾನ ಮಹತ್ವದ ಕೊಡುಗೆಯಾಗಲಿದೆ. ತಮ್ಮ ಮನವಿಗೆ ಸ್ಪಂದಿಸಿ ತಾಲೂಕಿನ ಐದು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಅನುದಾನ ಮಂಜೂರು ಮಾಡಿದ ವಿಧಾನ ಪರಿಷತ್ ಸದಸ್ಯ ವಿನಯ ಕಾರ್ತಿಕ ಪ್ರಕಾಶ ಅವರಿಗೆ ಸುಷ್ಮಾ ರಾಜಗೋಪಾಲ ರೆಡ್ಡಿ ಕೃತಜ್ಞತೆ ಸಲ್ಲಿಸಿದ್ದಾರೆ.