ಉತ್ತರ ಕನ್ನಡದ ಅಭಿವೃದ್ಧಿಗೆ ಹೊಸ ವೇಗ: ವಂದೇ ಭಾರತ್ ರೈಲು ಸೇವೆಗೆ ಮಾಸ್ತಪ್ಪ ನಾಯ್ಕ ಹರ್ಷ

ಕಾರವಾರ: ಯಶವಂತಪುರದಿಂದ ಮಡಗಾಂವ್‌ವರೆಗೆ ವಂದೇ ಭಾರತ್ ರೈಲು ಸಂಚಾರ ಆರಂಭವಾಗಿರುವುದು ಉತ್ತರ ಕನ್ನಡ ಜಿಲ್ಲೆಯ ಜನತೆಗೆ ಸಂತಸ ಹಾಗೂ ಹೆಮ್ಮೆಯ ಸಂಗತಿಯಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಮಾಸ್ತಪ್ಪ ನಾಯ್ಕ ಬಲ್ಸೆ ಹರ್ಷ ವ್ಯಕ್ತಪಡಿಸಿದ್ದಾರೆ.
ಈ ರೈಲು ಸಂಪರ್ಕದಿಂದ ಉತ್ತರ ಕನ್ನಡ ಜಿಲ್ಲೆಯ ಜನರಿಗೆ ಬೆಂಗಳೂರು ಹಾಗೂ ಗೋವಾ ಭಾಗಗಳಿಗೆ ಪ್ರಯಾಣಿಸಲು ಹೆಚ್ಚಿನ ಅನುಕೂಲವಾಗಲಿದೆ. ವಿಶೇಷವಾಗಿ ಪ್ರವಾಸೋದ್ಯಮ, ವ್ಯಾಪಾರ, ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರಗಳ ಅಭಿವೃದ್ಧಿಗೆ ಹೊಸ ವೇಗ ದೊರೆಯಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ನೈಸರ್ಗಿಕ ಸಂಪತ್ತು, ಪ್ರವಾಸಿ ತಾಣಗಳು, ಧಾರ್ಮಿಕ ಕ್ಷೇತ್ರಗಳು ಹಾಗೂ ವ್ಯಾಪಾರಿಕ ಅವಕಾಶಗಳನ್ನು ಹೊಂದಿರುವ ಉತ್ತರ ಕನ್ನಡ ಜಿಲ್ಲೆಗೆ ವೇಗದ ರೈಲು ಸಂಪರ್ಕ ದೊರೆಯುವುದರಿಂದ ಪ್ರವಾಸಿಗರ ಆಗಮನ ಹೆಚ್ಚುವ ನಿರೀಕ್ಷೆಯಿದೆ. ಇದರಿಂದ ಸ್ಥಳೀಯ ವ್ಯಾಪಾರಸ್ಥರು, ವಿದ್ಯಾರ್ಥಿಗಳು, ಉದ್ಯೋಗಿಗಳು ಸೇರಿದಂತೆ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದಿದ್ದಾರೆ.
ಅಭಿವೃದ್ಧಿ ಎಂದರೆ ಕೇವಲ ಭರವಸೆ ನೀಡುವುದಲ್ಲ, ಜನಸಾಮಾನ್ಯರ ದೈನಂದಿನ ಬದುಕಿಗೆ ಅನುಕೂಲವಾಗುವ ಮೂಲಸೌಕರ್ಯಗಳನ್ನು ಒದಗಿಸುವುದಾಗಿದೆ. ಉತ್ತಮ ಸಾರಿಗೆ ಸಂಪರ್ಕವು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಮುಖ ಆಧಾರವಾಗಿದೆ ಎಂದು ತಿಳಿಸಿದ್ದಾರೆ.
ಈ ಮಹತ್ವದ ರೈಲು ಸೇವೆ ಆರಂಭಕ್ಕೆ ಸಹಕಾರ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ರೈಲ್ವೆ ಸಚಿವರು ಹಾಗೂ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಮಾಸ್ತಪ್ಪ ನಾಯ್ಕ ಬಲ್ಸೆ ಅಭಿನಂದನೆ ಸಲ್ಲಿಸಿದ್ದಾರೆ.
ಮುಂದಿನ ದಿನಗಳಲ್ಲಿಯೂ ಉತ್ತರ ಕನ್ನಡ ಜಿಲ್ಲೆಯ ರೈಲ್ವೆ, ರಸ್ತೆ, ಶಿಕ್ಷಣ, ಆರೋಗ್ಯ ಹಾಗೂ ಕೈಗಾರಿಕಾ ಕ್ಷೇತ್ರಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ದೊರೆಯಬೇಕು. ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಗಳು ಈಡೇರಬೇಕು ಎಂದು ಅವರು ಆಶಯ ವ್ಯಕ್ತಪಡಿಸಿದ್ದಾರೆ.
