
ಉತ್ತರ ಕನ್ನಡ: ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಸ್ಥಳೀಯ ಮಟ್ಟದಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಉತ್ತರ ಕನ್ನಡ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ನವೆಂಬರ್ 14 ಮತ್ತು 16ರಂದು ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆಗಳನ್ನು ಆಯೋಜಿಸಲಾಗಿದೆ.
ನವೆಂಬರ್ 14ರಂದು ಬೆಳಗ್ಗೆ 10.30ಕ್ಕೆ ಭಟ್ಕಳ, ಸಿದ್ದಾಪುರ, ಮುಂಡಗೋಡ ಹಾಗೂ ಹೊನ್ನಾವರ ತಾಲೂಕುಗಳಲ್ಲಿ ಸಭೆಗಳು ನಡೆಯಲಿವೆ.
ಭಟ್ಕಳ-ಹೊನ್ನಾವರ ಕ್ಷೇತ್ರದ ಶಾಸಕ ಹಾಗೂ ವಿಧಾನಸಭಾ ಉಪಾಧ್ಯಕ್ಷ ಮಂಕಾಳ ಎಸ್. ವೈದ್ಯ ಅವರ ನೇತೃತ್ವದಲ್ಲಿ ಭಟ್ಕಳ ತಾಲೂಕಿನ ಸೂಸಗಡಿ ಹೋಬಳಿಯ ಬೆಳಕೆ ಗ್ರಾಮದ ಬೊಮ್ಮನಕೇರಿ ದೇವಸ್ಥಾನದ ಸಭಾಭವನದಲ್ಲಿ ಸಭೆ ನಡೆಯಲಿದೆ.
ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಅವರ ನೇತೃತ್ವದಲ್ಲಿ ಸಿದ್ದಾಪುರ ತಾಲೂಕಿನ ಉಂಬಳಮನೆ ಹೋಬಳಿಯ ಅಣಲೇಬೈಲ್ (ಹೆರೂರು) ಗ್ರಾಮದ ಡಾ. ಅಂಬೇಡ್ಕರ್ ಸಭಾಭವನದಲ್ಲಿ ಸಭೆ ಆಯೋಜಿಸಲಾಗಿದೆ.
ಯಲ್ಲಾಪುರ-ಮುಂಡಗೋಡ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಅವರ ನೇತೃತ್ವದಲ್ಲಿ ಮುಂಡಗೋಡ ತಾಲೂಕಿನ ಪಾಳಾ ಹೋಬಳಿಯ ಮಳಗಿ ಗ್ರಾಮದ ದಿ. ಹನುಮಂತಪ್ಪ ತಿಪ್ಪಣ್ಣ ಪಾಟೀಲ್ ಸಮುದಾಯ ಭವನದಲ್ಲಿ ಸಭೆ ನಡೆಯಲಿದೆ.
ಕುಮಟಾ-ಹೊನ್ನಾವರ ಕ್ಷೇತ್ರದ ಶಾಸಕ ದಿನಕರ ಕೆ. ಶೆಟ್ಟಿ ಅವರ ನೇತೃತ್ವದಲ್ಲಿ ಹೊನ್ನಾವರ ತಾಲೂಕಿನ ಹೊನ್ನಾವರ ಹೋಬಳಿಯ ಹಳದಿಪುರ ಗ್ರಾಮದ ಜೋಗಿನಕಟ್ಟೆಯ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಭಾಭವನದಲ್ಲಿ ಸಭೆ ಆಯೋಜಿಸಲಾಗಿದೆ.
ನವೆಂಬರ್ 16ರಂದು ಬೆಳಗ್ಗೆ 10.30ಕ್ಕೆ ಕಾರವಾರ-ಅಂಕೋಲಾ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಮಾರ್ಕೆಟಿಂಗ್ ಕಮ್ಯುನಿಕೇಶನ್ ಆ್ಯಂಡ್ ಅಡ್ವರ್ಟೈಸಿಂಗ್ ಏಜೆನ್ಸಿ ಅಧ್ಯಕ್ಷ ಸತೀಶ್ ಕೃಷ್ಣ ಸೈಲ್ ಅವರ ನೇತೃತ್ವದಲ್ಲಿ ಅಂಕೋಲಾ ತಾಲೂಕಿನ ಬಳಲೆ ಹೋಬಳಿಯ ಬೆಳಸೆ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಸಭೆ ನಡೆಯಲಿದೆ.
ಸಾರ್ವಜನಿಕರು ಸಭೆಗಳಲ್ಲಿ ಭಾಗವಹಿಸಿ ತಮ್ಮ ಸಮಸ್ಯೆ ಹಾಗೂ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ. ಅಲ್ಲದೆ, ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ಅರ್ಜಿಗಳನ್ನು ಸಲ್ಲಿಸಿ, ಸ್ಥಳೀಯ ಮಟ್ಟದಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
