ಉತ್ತರ ಕನ್ನಡದ ನೂತನ ಜಿಲ್ಲಾಧಿಕಾರಿಯಾಗಿ ಹರ್ಷಲ್ ನಾರಾಯಣರಾವ್ ಭೋಯರ್ ಅಧಿಕಾರ ಸ್ವೀಕಾರ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2016ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಭೋಯರ್ ಹರ್ಷಲ್ ನಾರಾಯಣರಾವ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.
ರಾಜ್ಯ ಸರ್ಕಾರದ ಆಡಳಿತಾತ್ಮಕ ವರ್ಗಾವಣೆ ಆದೇಶದಂತೆ, ಈ ಹಿಂದೆ ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕೆ. ಲಕ್ಷ್ಮೀಪ್ರಿಯಾ ಅವರನ್ನು ಬೆಂಗಳೂರಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಶೇಷ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿತ್ತು. ಅವರ ಸ್ಥಾನಕ್ಕೆ ಹರ್ಷಲ್ ನಾರಾಯಣರಾವ್ ಅವರನ್ನು ನೇಮಕ ಮಾಡಲಾಗಿತ್ತು.
ಮಹಾರಾಷ್ಟ್ರ ಮೂಲದವರಾದ ಹರ್ಷಲ್ ನಾರಾಯಣರಾವ್ ಅವರು 2016ನೇ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಎಸ್ ಅಧಿಕಾರಿಯಾಗಿದ್ದಾರೆ. ಪುಣೆ ವಿಶ್ವವಿದ್ಯಾಲಯದಿಂದ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿದ್ದಾರೆ. ಯುಪಿಎಸ್‌ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಭಾರತೀಯ ಆಡಳಿತ ಸೇವೆಗೆ ಸೇರ್ಪಡೆಯಾಗಿದ್ದಾರೆ.
ಇವರು ಈ ಹಿಂದೆ ಯಾದಗಿರಿ ಜಿಲ್ಲಾಧಿಕಾರಿಯಾಗಿ, ಬೆಂಗಳೂರಿನ ಅಟಲ್ ಜನಸ್ನೇಹಿ ಕೇಂದ್ರದ ನಿರ್ದೇಶಕರಾಗಿ ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಇ-ಆಡಳಿತ ವಿಭಾಗದಡಿ ನಾಗರಿಕ ಸೇವೆಗಳ ವಿದ್ಯುನ್ಮಾನ ವಿತರಣಾ (EDCS) ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ.
ವಿವಿಧ ಆಡಳಿತಾತ್ಮಕ ಹುದ್ದೆಗಳಲ್ಲಿ ಅನುಭವ ಹೊಂದಿರುವ ನೂತನ ಜಿಲ್ಲಾಧಿಕಾರಿಗಳಿಂದ ಜಿಲ್ಲೆಯ ಅಭಿವೃದ್ಧಿ, ಮೂಲಸೌಕರ್ಯ, ಪ್ರವಾಸೋದ್ಯಮ, ಜನಸಾಮಾನ್ಯರ ಸಮಸ್ಯೆಗಳ ಪರಿಹಾರ ಹಾಗೂ ಆಡಳಿತ ವ್ಯವಸ್ಥೆಯಲ್ಲಿ ಮತ್ತಷ್ಟು ಸುಧಾರಣೆ ನಿರೀಕ್ಷಿಸಲಾಗಿದೆ.
