
ಕಾರವಾರ: ಸಾರ್ವಜನಿಕ ಶಾಂತಿ, ಆರೋಗ್ಯ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಡಿಜೆ ವ್ಯವಸ್ಥೆಗಳು, ಬೇಸ್ ಬೂಸ್ಟರ್‌ಗಳು, ಮೊಬೈಲ್ ಡಿಜೆ ವಾಹನಗಳು ಹಾಗೂ 75 ಡೆಸಿಬೆಲ್‌ಗಿಂತ ಹೆಚ್ಚಿನ ಶಬ್ದ ವೃದ್ಧಿ ಸಾಧನಗಳ ಬಳಕೆಯನ್ನು ಮುಂದಿನ ಆದೇಶದವರೆಗೆ ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಆದೇಶ ಹೊರಡಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಹಬ್ಬಗಳು, ಮೆರವಣಿಗೆಗಳು ಹಾಗೂ ವಿವಿಧ ಸಾರ್ವಜನಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಹೆಚ್ಚಿನ ಡೆಸಿಬೆಲ್‌ನ ಡಿಜೆ ವ್ಯವಸ್ಥೆಗಳು, ಲೌಡ್‌ಸ್ಪೀಕರ್‌ಗಳು ಮತ್ತು ಇತರ ಶಬ್ದ ವೃದ್ಧಿ ಸಾಧನಗಳನ್ನು ಅತಿಯಾಗಿ ಬಳಸುತ್ತಿರುವುದರಿಂದ ಸಾರ್ವಜನಿಕ ಶಾಂತಿ, ಆರೋಗ್ಯ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುತ್ತಿರುವ ಕುರಿತು ಪೊಲೀಸ್ ಅಧೀಕ್ಷಕರು ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಿದ್ದರು.
ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಶಬ್ದ ಮಾಲಿನ್ಯ ನಿಯಂತ್ರಣ ನಿಯಮಗಳಡಿ ಡಿಜೆ ವ್ಯವಸ್ಥೆಗಳು ಮತ್ತು ಹೆಚ್ಚಿನ ಡೆಸಿಬೆಲ್ ಶಬ್ದ ವೃದ್ಧಿ ಸಾಧನಗಳ ಬಳಕೆಯನ್ನು ನಿಯಂತ್ರಿಸುವ ಅಥವಾ ನಿಷೇಧಿಸುವಂತೆ ಪೊಲೀಸ್ ಇಲಾಖೆಯು ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ಮಹತ್ವದ ಆದೇಶವನ್ನು ಹೊರಡಿಸಿದೆ.
ಶಬ್ದ ಮಾಲಿನ್ಯ (ನಿಯಂತ್ರಣ ಮತ್ತು ನಿಯಮ) ನಿಯಮಗಳು, 2000 ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿ.ಎನ್.ಎಸ್.ಎಸ್), 2023ರ ಕಲಂ 163ರಡಿ ಜಿಲ್ಲಾಧಿಕಾರಿಗಳಿಗೆ ಪ್ರದತ್ತವಾಗಿರುವ ಅಧಿಕಾರದ ಮೇರೆಗೆ ಜಿಲ್ಲೆಯ ವ್ಯಾಪ್ತಿಯಲ್ಲಿ ಯಾವುದೇ ಡಿಜೆ ವ್ಯವಸ್ಥೆಗಳು, ಬೇಸ್ ಬೂಸ್ಟರ್‌ಗಳು, ಮೊಬೈಲ್ ಡಿಜೆ ವಾಹನಗಳು ಹಾಗೂ 75 ಡೆಸಿಬೆಲ್ ಮೀರಿದ ಶಬ್ದ ವೃದ್ಧಿ ಸಾಧನಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಇದಲ್ಲದೆ, ವಸತಿ ಪ್ರದೇಶಗಳು, ಸೈಲೆಂಟ್ ಝೋನ್‌ಗಳು, ಆಸ್ಪತ್ರೆ, ಶಾಲೆ, ನ್ಯಾಯಾಲಯ ಹಾಗೂ ಧಾರ್ಮಿಕ ಸ್ಥಳಗಳಿಂದ 100 ಮೀಟರ್ ವ್ಯಾಪ್ತಿಯ ಪ್ರದೇಶಗಳು, ಇಳಿವು ರಸ್ತೆ/ಸಂಚಾರ ದಟ್ಟಣೆ ಪ್ರದೇಶಗಳು ಮತ್ತು ಸಮುದಾಯ ಸೂಕ್ಷ್ಮ ಪ್ರದೇಶಗಳಲ್ಲಿ ಡಿಜೆ ಅಥವಾ ಹೆಚ್ಚಿನ ಶಬ್ದ ಉಂಟುಮಾಡುವ ಸಾಧನಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ಅಲ್ಲದೆ, ಇಡೀ ಉತ್ತರ ಕನ್ನಡ ಜಿಲ್ಲೆಯಾದ್ಯಂತ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಡಿಜೆ ಸೇರಿದಂತೆ ಹೆಚ್ಚಿನ ಶಬ್ದ ಉಂಟುಮಾಡುವ ಸಾಧನಗಳ ಬಳಕೆಗೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ.
ಯಾವುದೇ ಸಾರ್ವಜನಿಕ ಕಾರ್ಯಕ್ರಮ, ಮೆರವಣಿಗೆ ಅಥವಾ ಆಚರಣೆಯನ್ನು ಆಯೋಜಿಸುವವರು ಅತೀ ಅವಶ್ಯಕತೆಯಿದ್ದಲ್ಲಿ ಮಾತ್ರ ಪೊಲೀಸ್ ಇಲಾಖೆಯಿಂದ ಪೂರ್ವ ಲಿಖಿತ ಷರತ್ತುಬದ್ಧ ಅನುಮತಿ ಪಡೆದು ಮಿತ ಶಬ್ದ ವ್ಯವಸ್ಥೆಗಳನ್ನು ಬಳಸಬೇಕು. ಶಬ್ದ ಮಾಲಿನ್ಯ ನಿಯಮಗಳನ್ನು ಪಾಲಿಸುವ ಕುರಿತು ಕಾರ್ಯಕ್ರಮದ ಆಯೋಜಕರು ಲಿಖಿತ ಮುಚ್ಚಳಿಕೆ ಪತ್ರ ನೀಡುವುದು ಕಡ್ಡಾಯವಾಗಿದೆ.
ಈ ಆದೇಶದ ಉಲ್ಲಂಘನೆ ಸಂಭವಿಸಿದಲ್ಲಿ ಸಂಬಂಧಪಟ್ಟ ಕಾರ್ಯಕ್ರಮದ ಆಯೋಜಕರನ್ನೇ ವೈಯಕ್ತಿಕವಾಗಿ ಹೊಣೆಗಾರರನ್ನಾಗಿ ಮಾಡಲಾಗುವುದು. ಅಲ್ಲದೆ, ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಎಚ್ಚರಿಕೆ ನೀಡಿದ್ದಾರೆ.
ಆದೇಶವನ್ನು ತಕ್ಷಣದಿಂದ ಜಾರಿಗೆ ತರಲು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ. ಜಿಲ್ಲಾಡಳಿತದ ಈ ಕ್ರಮವು ಶಬ್ದ ಮಾಲಿನ್ಯ ನಿಯಂತ್ರಣದ ಜೊತೆಗೆ ಸಾರ್ವಜನಿಕ ಶಾಂತಿ, ಆರೋಗ್ಯ ಮತ್ತು ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ಮಹತ್ವದ್ದಾಗಿದೆ.
