UK Express Logo

ವಿಬಿ-ಜಿ ರಾಮ್-ಜಿ ಯೋಜನೆ: ಉತ್ತರ ಕನ್ನಡದ 6,759 ಕುಟುಂಬಗಳಿಗೆ ಉದ್ಯೋಗ

By UKExpress on 9/9/2026

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವಿಬಿ-ಜಿ ರಾಮ್-ಜಿ ಯೋಜನೆಯಡಿ ಇದುವರೆಗೆ 14,058 ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದ್ದು, 38,492 ಮಾನವ ದಿನಗಳ ಉದ್ಯೋಗ ಸೃಜನೆ ಮಾಡಲಾಗಿದೆ. ಇದರ ಮೂಲಕ 6,759 ಕುಟುಂಬಗಳಿಗೆ ಉದ್ಯೋಗ ಒದಗಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ತಿಳಿಸಿದರು.

ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಬಿ-ಜಿ ರಾಮ್-ಜಿ ಯೋಜನೆಯಡಿ ಜಿಲ್ಲೆಯಲ್ಲಿ ಜಲ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವುದು, ಜಲ ಸಂರಕ್ಷಣೆ ಹಾಗೂ ನೀರಿನ ಸದ್ಬಳಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ಯೋಜನೆಯಡಿ ಅಂತರ್ಜಲ ಮರುಪೂರಣ, ಕೆರೆಗಳ ಪುನಶ್ಚೇತನ ಮತ್ತು ಅಭಿವೃದ್ಧಿ, ಚೆಕ್‌ಡ್ಯಾಂಗಳ ನಿರ್ಮಾಣ ಹಾಗೂ ಜಲಸಂಗ್ರಹಣಾ ವ್ಯವಸ್ಥೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಲಾಗಿದೆ. ಕೇಂದ್ರ ಅಂತರ್ಜಲ ಮಂಡಳಿಯ ಮಾರ್ಗಸೂಚಿಯಂತೆ ವೈಜ್ಞಾನಿಕವಾಗಿ ಗುರುತಿಸಲಾದ ಸ್ಥಳಗಳಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲು ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ವಾಡಿಕೆಯ ಮಳೆಯ ಪ್ರಮಾಣಕ್ಕಿಂತ ಕಡಿಮೆ ಮಳೆಯಾಗಿರುವ ಹಿನ್ನೆಲೆಯಲ್ಲಿ ಅಂತರ್ಜಲ ಸಂರಕ್ಷಣೆ ಮತ್ತು ಮಳೆನೀರು ಸಂಗ್ರಹಣೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಜಿಲ್ಲೆಯಲ್ಲಿ ನೋಂದಾಯಿತ 2.01 ಲಕ್ಷ ಉದ್ಯೋಗ ಚೀಟಿಗಳ ಪೈಕಿ 0.72 ಲಕ್ಷ ಕುಟುಂಬಗಳು ಸಕ್ರಿಯವಾಗಿವೆ. ಉಳಿದ ಕುಟುಂಬಗಳನ್ನು ಯೋಜನೆಯ ವ್ಯಾಪ್ತಿಗೆ ತರಲು ಸೆಪ್ಟೆಂಬರ್ 15ರವರೆಗೆ ಜಾಬ್ ಕಾರ್ಡ್ ಮೇಳ ಆಯೋಜಿಸಲಾಗಿದೆ.

ಜಾಬ್ ಕಾರ್ಡ್ ಮೇಳದ ಮೂಲಕ ಅರ್ಹ ಕಾರ್ಮಿಕರನ್ನು ಗುರುತಿಸಿ, ಉದ್ಯೋಗದ ಬೇಡಿಕೆಯನ್ನು ಸ್ವೀಕರಿಸಿ ಹೊಸ ಜಾಬ್ ಕಾರ್ಡ್‌ಗಳನ್ನು ನೀಡಲಾಗುವುದು. ಗ್ರಾಮೀಣ ಪ್ರದೇಶದ ಅರ್ಹ ಕುಟುಂಬಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

DAY-NRLM ಸಹಯೋಗದಲ್ಲಿ ಮಹಿಳೆಯರು ಹಾಗೂ ಸ್ವಸಹಾಯ ಸಂಘಗಳಿಗೆ ಪೂರಕವಾಗುವಂತೆ ತರಬೇತಿ ಕೇಂದ್ರ, SHE ಮಾರ್ಟ್, ಕೋಳಿ ಶೆಡ್, ಗೋದಾಮು ಹಾಗೂ ಸೀಡ್ ಬ್ಯಾಂಕ್‌ಗಳ ಅಭಿವೃದ್ಧಿಗೂ ಅವಕಾಶ ಕಲ್ಪಿಸಲಾಗಿದೆ. ಇದರೊಂದಿಗೆ ಗ್ರಾಮೀಣ ಮಹಿಳೆಯರು ಹಾಗೂ ಸ್ವಸಹಾಯ ಸಂಘಗಳ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

‘ವಿಕಸಿತ ಗ್ರಾಮ ಪಂಚಾಯತ್’ ಯೋಜನೆಯಡಿ ಗ್ರಾಮಸಭೆಗಳ ಮೂಲಕ ಸ್ಥಳೀಯ ಅಗತ್ಯಗಳನ್ನು ಗುರುತಿಸಿ ಕ್ರಿಯಾ ಯೋಜನೆ ರೂಪಿಸಲಾಗುತ್ತಿದೆ. ಸ್ಥಳೀಯ ಮಟ್ಟದ ಅಗತ್ಯಗಳಿಗೆ ಅನುಗುಣವಾಗಿ ಗ್ರಾಮಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ಹಣ ಪಾವತಿಗೆ ಸಂಬಂಧಿಸಿದಂತೆ ₹53.18 ಲಕ್ಷ ಹಾಗೂ ಸಾಮಗ್ರಿ ವೆಚ್ಚವಾಗಿ ₹1,824.76 ಲಕ್ಷ ಅನುದಾನ ಬರಬೇಕಿದೆ. ಅನುದಾನ ಬಿಡುಗಡೆಯಾದ ನಂತರ ಬಾಕಿ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ದಿಲೀಷ್ ಶಶಿ ತಿಳಿಸಿದರು.

ಉದ್ಯೋಗದ ಜೊತೆಗೆ ಗ್ರಾಮಗಳ ಅಭಿವೃದ್ಧಿ ಎಂಬ ಆಶಯದೊಂದಿಗೆ ವಿಬಿ-ಜಿ ರಾಮ್-ಜಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಅರ್ಹ ಗ್ರಾಮೀಣ ಕುಟುಂಬಗಳು ತಮ್ಮ ಗ್ರಾಮ ಪಂಚಾಯಿತಿಯನ್ನು ಸಂಪರ್ಕಿಸಿ ಉದ್ಯೋಗದ ಬೇಡಿಕೆ ಸಲ್ಲಿಸುವಂತೆ ಹಾಗೂ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಹಾಗೂ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಉಪಸ್ಥಿತರಿದ್ದರು.